ಚಂಡೀಗಢ: ಪಂಜಾಬ್ ರಾಜಧಾನಿ ಅಮೃತಸರದ ಸಮೀಪದ ಐದು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.
ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಈ ದುರಂತ ಸಂಭವಿಸಿದೆ. ಅಸ್ವಸ್ಥರಾಗಿರುವ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 14 ಜನ ಮೃತಪಟ್ಟಿರುವುದಾಗಿ ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಖಚಿತಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರಭ್ಜಿತ್ ಸಿಂಗ್, ಕುಲ್ಬೀರ್ ಸಿಂಗ್, ಸಾಹಿಬ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.