ನವದೆಹಲಿ: ಯಾರು ನಮ್ಮ ದೇಶದ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದ ಸೃಷ್ಟಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರಿ ಸಂಚಲನ ಮೂಡಿಸಿದೆ. ವಿಜಯ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಕೂಡಾ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಆದರೆ, ವಿಜಯ್ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಮತ್ತು ಆರ್ಎಸ್ಎಸ್ನ ಮನಃಸ್ಥಿತಿ ಯಾವತ್ತಿಗೂ ಮಹಿಳಾ ವಿರೋಧಿಯೇ ಆಗಿರುತ್ತದೆ. ಉಗ್ರರ ಗುಂಡಿಗೆ ಬಲಿಯಾದ ನೌಕಾ ಪಡೆಯ ಅಧಿಕಾರಿಯ ಪತ್ನಿಯನ್ನು ಮೊದಲಿಗೆ ಟ್ರೋಲ್ ಮಾಡಲಾಯಿತು. ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರ ಮಗಳನ್ನು ಹಿಂಸಿಸಲಾಯಿತು. ಈಗ ಕರ್ನಲ್ ಸೋಫಿಯಾ ಖುರೇಷಿ ಅವರ ಮೇಲೆ ಬಿಜೆಪಿ ಸಚಿವರು ಕೀಳು ಮಟ್ಟದಲ್ಲಿ ಮಾತನಾಡುತ್ತಿದ್ದಾರೆ. ಇಂತಹ ಕೀಳು ಅಭಿರುಚಿಯ ಸಚಿವನನ್ನು ಪ್ರಧಾನಿ ಮೋದಿ ಅವರು ತಕ್ಷಣವೇ ಅಮಾನತು ಮಾಡಬೇಕು ಎಂದು ಆಗ್ರಹಪಡಿಸಿದ್ದಾರೆ.