ಬೆಂಗಳೂರು: ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್ ಡಿಎಲ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ತಮನ್ನಾ ಅವರ ಆಯ್ಕೆಯು ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವಂತಿದ್ದು, ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸೋಪ್ಸ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರೇ ಆಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ? ಎಂದು ನಾರಾಯಣಗೌಡರು ಪ್ರಶ್ನಿಸಿದ್ದಾರೆ.
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿಯಾಗಿದೆ. ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ ಅವರನ್ನು ನೇಮಿಸಲು ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯ ಎಂದಿದ್ದಾರೆ.
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡಿಗರಿಗೆ ತಮ್ಮ ಸಂಸ್ಕೃತಿ ಮತ್ತು ಭಾಷೆಯೊಂದಿಗೆ ಸಾವಯವ ಸಂಬಂಧವಿರುವ ಕನ್ನಡ ನಟಿಯರೊಂದಿಗೆ ಬ್ರಾಂಡ್ ಅನ್ನು ಬೆಳೆಸುವುದು ಸಹಜವಾಗಿ ಪರಿಣಾಮಕಾರಿಯಾಗಿರುತ್ತದೆ. ಆದರೆ ತಮನ್ನಾ ಭಾಟಿಯಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ. ತಮನ್ನಾ ಭಾಟಿಯಾ ಅವರು ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸೋಪ್ಸ್ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ. ಹಿಂದಿ ಚಿತ್ರರಂಗದ ನಟಿಯರನ್ನು ಆಯ್ಕೆ ಮಾಡುವ ಮೂಲಕ ಕರ್ನಾಟಕದ ಸ್ಥಳೀಯ ಸಂಸ್ಕೃತಿಯ ಮೇಲೆ ಹಿಂದಿ ಸಂಸ್ಕೃತಿಯನ್ನು ಹೇರಲು ಪ್ರಯತ್ನಿಸುವುದು ಸ್ವೀಕಾರಾರ್ಹವಲ್ಲ. ಮೈಸೂರು ಸೋಪ್ಸ್ ನಂತಹ ಕರ್ನಾಟಕದ ಐತಿಹಾಸಿಕ ಬ್ರಾಂಡ್ ಗೆ ಕನ್ನಡಿಗರ ಗುರುತನ್ನು ಪ್ರತಿನಿಧಿಸುವ ವ್ಯಕ್ತಿಯನ್ನೇ ಆಯ್ಕೆ ಮಾಡಬೇಕು ಎಂದೂ ಆಗ್ರಹಪಡಿಸಿದ್ದಾರೆ.
ಸರ್ಕಾರ ಕೂಡಲೇ ತಮನ್ನಾ ಭಾಟಿಯಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಕನ್ನಡ ನಟಿಯರನ್ನು ಆಯ್ಕೆ ಮಾಡಬೇಕು. ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ವೆಚ್ಚದ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಮತ್ತು ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬೇಕು. ಭವಿಷ್ಯದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗೆ ಗೌರವ ನೀಡುವಂತಹ ನಿರ್ಧಾರಗಳನ್ನು ಮಾತ್ರ ತೆಗೆದುಕೊಳ್ಳುವಂತೆ ಖಾತರಿ ನೀಡಬೇಕು ಎಂದೂ ನಾರಾಯಣಗೌಡರು ಒತ್ತಾಯಿಸಿದ್ದಾರೆ.