ಪ್ರಧಾನಿಯಾಗಿ 11 ವರ್ಷ ಮುಗಿಸಿದ ನರೇಂದ್ರ ಮೋದಿ: ಇವರ ಸರ್ಕಾರಕ್ಕೆ ಶೂನ್ಯ ಅಂಕ ಎಂದು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ

Most read

ಮೈಸೂರು: ಮೂರನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಮೋದಿ ಅವರು ಪ್ರಚಾರದಿಂದಲೇ ಬದುಕಿದ್ದಾರೆ. ಈ ಹಿಂದೆ ಅವರು ನೋಟು ಅಮಾನ್ಯೀಕರಣ ಮಾಡಿದರು. ಇದರಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಬಂತೇ ಎಂದು ಪ್ರಶ್ನಿಸಿದರು. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ಹಾಗಾದರೆ ರೈತರು ಒಂದು ವರ್ಷ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

ಅವರು ಅಧಿಕಾರವನ್ನು ಹನ್ನೊಂದು ವರ್ಷ ಪೂರ್ಣಗೊಳಿಸಿದ್ದಾರೆ ಅಷ್ಟೇ. ಅವರು ಹೇಳಿದಂತೆ ನಡೆದುಕೊಂಡಿಲ್ಲ. ಸುಳ್ಳು ವಿಚಾರಗಳಿಗೆ ಪ್ರಚಾರ ಪಡೆಯುತ್ತಿದ್ದಾರೆ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ ಎಂದು ಟೀಕಿಸಿದರು.

ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಅನುಷ್ಠಾನ ಮಾಡಲಾಗುವುದಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ನಮ್ಮ ಗ್ಯಾರಂಟಿಗಳನ್ನೇ ಜಾರಿ ಮಾಡಿದರು. ಮೋದಿ ಅವರು ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಇವರೇ ಪ್ರಧಾನಿಯಾಗಿ ಮಾಡಿದ್ದಾದರೂ ಏನು? ಎಂದು ಪ್ರಶ್ನಿಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದು ಟೀಕಿಸಿದರು.

More articles

Latest article