ಬೆಂಗಳೂರು: ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಾಯ, ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ, ಗ್ರಂಥಾಲಯ ನಿರ್ಮಿಸಲು ರಿಯಾಯಿತಿ ದರದಲ್ಲಿ ನಿವೇಶನ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಒದಗಿಸಲು ಇಂದು ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸೋಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್ ಈ ವಿಷಯ ತಿಳಿಸಿದರು.
ಮಾವು ಬೆಳೆಗಾರರ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಕೋಲಾರ, ಬೆಂಗಳೂರು ಗ್ರಾಮೀಣ ಭಾಗದ ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ದೆಹಲಿಗೆ ಭೇಟಿ ನೀಡಿ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರವನ್ನು ನೀಡುವಂತೆ ಕೇಂದ್ರವನ್ನು ಒತ್ತಾಯಿಸಬೇಕೆಂದು ಸೂಚನೆ ನೀಡಿದ್ದಾರೆ.
ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜುಲೈ 16-17 ರಂದು ನಿಗದಿಯಾಗಬಹುದು. ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮುಂದೂಡಲು ಕಾರಣವೇನೆಂದರೆ ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಮುಂದೂಡಲಾಯಿತು ಎಂದರು.
ಕೆ.ಎ.ಟಿ ಬಗ್ಗೆ ಸಾಕಷ್ಟು ಚರ್ಚೆ, ಆಕ್ರೋಶ ವ್ಯಕ್ತವಾಗಿದ್ದು, ಇದರ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಸಚಿವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು .
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. 612 ಕೋಟಿ ರೂ.ಗಳ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ರಮಾಕಾಂತ ಚವ್ಹಾಣ, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆ ಕ್ಕೆೆ ನಿರ್ಬಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸಚಿವ ತಿಳಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಿದೆ.
ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆನರು ಮೊದಲಿನಿಂದ ಗೇರುಗುಡ್ಡ ಬಸಾಪೂರ ಎಂದು ಕರೆಯುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.
ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಜಲಸಂಪನ್ಮೂಲ ಇಲಾಖೆಯಡಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಭಾಗದಲ್ಲಿ ಬ್ರಿಡ್ಜ್ –ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ 134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಿನ್ನೀರಿನ ಮೇಲ್ಭಾಗದಲ್ಲಿರುವ ಬಾಧಿತ ಅಚ್ಚುಕಟ್ಟು ಪ್ರದೇಶಗಳಾದ ಆರ್ಯಭೋಗಾಪುರ, ಮುದಲಗುಂಡಿ, ವನರಳ್ಳಿ, ಕಿಲನೂರು, ಕಲ್ಮಳ್ಳಿ, ಅಮರಾಪುರ ತಾಂಡಾಗಳು ಕಿಲ್ಲರಹಟ್ಟಿ ಗ್ರಾಮಗಳಿಗೆ ಅನುಕೂಲ ಕಲಗಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ರಾಯಚೂರು ತಾಲ್ಲೂಕಿನ ಸಿಂಧನೂರು ತಾಲ್ಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ 43.10 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.