ಬೆಂಗಳೂರು: ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಅವಲೋಕಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬ ವಿಷಯವೂ ಸೇರಿದಂತೆ ಹಲವಾರು ವಿಷಯಗಳನ್ನು ಕುರಿತು ಚರ್ಚೆ ನಡೆಸಲು ಮತ್ತು ಜವಾಬ್ದಾರಿ ವಹಿಸಲು ಸುರ್ಜೆವಾಲಾ ಬಂದಿದ್ದಾರೆ ಎಂದರು.
ಶಾಸಕ ಇಕ್ಬಾಲ್ ಹುಸೇನ್‌ಗೆ ನೋಟಿಸ್ ನೀಡಿರುವ ಬಗ್ಗೆ ಪ್ರಶ್ನಿಸಿದಾಗ ಪಕ್ಷದಲ್ಲಿ ಶಿಸ್ತು ಮುಖ್ಯ. ಆದ್ದರಿಂದ ಅವರಿಗೆ ನೋಟಿಸ್ ನೀಡಿದ್ದೇನೆ. ಬೇರೆಯವರಿಗೂ ನೋಟಿಸ್ ನೀಡಲಿದ್ದೇವೆ. ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಮತ್ತೊಬ್ಬರ ಹೆಸರನ್ನು ಉಲ್ಲೇಖಿಸಬಾರದು ಎಂದರು.
ಪಕ್ಷ ಕಟ್ಟಲು ನಾನೊಬ್ಬನೆ ಕಾರಣ ಅಲ್ಲ. ನನ್ನ ಜತೆ ಲಕ್ಷಾಂತರ ಕಾರ್ಯಕರ್ತರು ಸೇರಿ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಾಡಪ್ರಭು ಕೆಂಪೇಗೌಡರ ಮಾಗಡಿ ಸ್ಮಾರಕ ಅಭಿವೃದ್ಧಿ ಸೇರಿದಂತೆ ಹಲವು ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ಚರ್ಚೆ ನಡೆಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಂಪುಟ ಸಭೆಯಲ್ಲಿ ಈ ವಿಷಯವನ್ನೂ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.