ಬೆಂಗಳೂರು: ಕೋವಿಡ್ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಪ್ರಕರಣಗಳನ್ನು ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ‘ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಹೇಳಿವೆ ಎಂದಿದ್ದಾರೆ.
ಹಾಸನ ಜಿಲ್ಲೆಯೂ ಸೇರಿ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆ ಮಾಡಿ, ತಡೆಯುವುದಕ್ಕೆ ನಾವು ಸಂಪೂರ್ಣ ಬದ್ಧರಾಗಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಜಾರಿ ಮಾಡಿದ್ದು ಸರ್ಕಾರ ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಹೇಳಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ 20ಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣಗಳನ್ನು ಪತ್ತೆ ಹಚ್ಚಿ ಅದಕ್ಕೆ ಪರಿಹಾರ ಮಾರ್ಗೊಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಳೆ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ ಎಂಬುದನ್ನು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಫೆಬ್ರುವರಿಯಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.