ಮುಖ್ಯ ಕಾರ್ಯದರ್ಶಿ ನಿಂದಿಸಿರುವ ಬಿಜೆಪಿ ಶಾಸಕ ರವಿ ಕುಮಾರ್ ಕ್ಷಮೆ ಯಾಚಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ

Most read

 ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಕ್ಷಮೆ ಯಾಚಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಪಡಿಸಿದ್ದಾರೆ.

ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ರವಿ ಕುಮಾರ್ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರ ಮೇಲೆ ರಾಜ್ಯ ಬಿಜೆಪಿ ನಾಯಕರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ.  ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿಯನ್ನು  ಕುರಿತು ಅವಹೇಳನಕಾರಿಯಾಗಿ  ಮಾತನಾಡಿರುವ ಬಿಜೆಪಿ ವಿಧಾನಪರಿಷತ್‌ ಸದಸ್ಯ  ಅವರ ಮನಸ್ಥಿತಿ ಎಂಥಹುದ್ದು ಎನ್ನುವುದು ಅರ್ಥವಾಗುತ್ತದೆ.  ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಮಾಡಿದ್ದಾರೆ. ಇವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಚಕಾರ ಎತ್ತಲಿಲ್ಲ. ಇಂತಹವರಿಗೆ ಕೇಂದ್ರ ಬಿಜೆಪಿ ನಾಯಕರು ಪರೋಕ್ಷ ಬೆಂಬಲ ನೀಡುತ್ತಿದ್ದಾರೆ. ಇಂತಹ ಘಟನೆಗಳು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತಹದ್ದು ಎಂಬುದನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

 ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಎಂದು ಭಾಸವಾಗುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

More articles

Latest article