ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಮತ್ತು ಪೂರ್ವ ಭಾರತದ ಮೂಲಕ ಸಾಗುವ ಮುಂಗಾರು ಮಾರುತದಿಂದ ಮಹಾರಾಷ್ಟ್ರ-ಕರ್ನಾಟಕ ಕರಾವಳಿಯುದ್ದಕ್ಕೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಇದೇ ಪರಿಸ್ಥಿತಿ ಮುಂದುವರೆಯುವ ನಿರೀಕ್ಷೆಯಿದೆ. ನಂತರ ಮಳೆಯ ತೀವ್ರತೆ ಕಡಿಮೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡದಲ್ಲೂ ಭಾರಿ ಮಳೆ ನಿರೀಕ್ಷೆಯಿದೆ. ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂಗಾರು ಅವಧಿಯುದ್ದಕ್ಕೂ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಜುಲೈ 7 ರಿಂದ ರಾಜ್ಯಾದ್ಯಂತ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೂ ಜುಲೈ 9 ರವರೆಗೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಗರಿಷ್ಠ 27, ಕನಿಷ್ಠ 20 ಡಿಗ್ರಿ ಸೆಲ್ಸಿಯನ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ.