ಕೋಮುಲ್‌ ಅಧ್ಯಕ್ಷರಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವಿರೋಧ ಆಯ್ಕೆ;ಮುಗಿಲು ಮುಟ್ಟಿದ ಸಂಭ್ರಮ

Most read

ಕೋಲಾರ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ಅಧ್ಯಕ್ಷರಾಗಿ ಮಾಲೂರಿನ ಕಾಂಗ್ರೆಸ್‌ ಶಾಸಕ, ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿ ಅವರು ಈ ಹುದ್ದೆಯನ್ನು ಅಲಂಕರಿಸಿದ್ದಾರೆ.

ಇಂದು ಕೋಮುಲ್‌ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಅರ್ಜಿ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಕ್ಕೂಟದ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಮಂದಿ ಜಯ ಸಾಧಿಸುವುದರೊಂದಿಗೆ ಕೋಮುಲ್‌ ಕಾಂಗ್ರೆಸ್‌ ಹಿಡಿತಕ್ಕೆ ಜಾರಿತ್ತು. ಮಾಲೂರು ಟೇಕಲ್‌ ಕ್ಷೇತ್ರದಿಂದ ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದರು. ಜೆಡಿಎಸ್‌–ಬಿಜೆಪಿ ಮೈತ್ರಿಕೂಟ ನಾಲ್ವರು ನಿರ್ದೇಶಕರು ಮಾತ್ರ ಗೆದ್ದಿದ್ದರು.

ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಅವರೂ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು. ಕೆ.ಎಚ್‌.ಮುನಿಯಪ್ಪ ಬಣ ಹಾಗೂ ಕೆ.ಆರ್‌.ರಮೇಶ್‌ ಕುಮಾರ್‌ ಬಣದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಜಟಾಪಟಿಯೇ ನಡೆದಿತ್ತು.

ಅಂತಿಮವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಸಂಧಾನ ಸೂತ್ರ ಏರ್ಪಟ್ಟಿತ್ತು. ನಂಜೇಗೌಡರನ್ನು ಕೋಮುಲ್‌ ಅಧ್ಯಕ್ಷರನ್ನಾಗಿ ಮಾಡಿ, ನಾರಾಯಣಸ್ವಾಮಿ ಅವರನ್ನು ಕೆಎಂಎಫ್‌ ಗೆ ನಾಮ ನಿರ್ದೇಶನ ಮಾಡಲು ತೀರ್ಮಾನ ಮಾಡಲಾಗಿತ್ತು.

ನಂಜೇಗೌಡ ಅವರ ಆಯ್ಕೆ ಖಚಿತವಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಂತರ ಮಾತನಾಡಿದ ನಂಜೇಗೌಡರು ಕೋಮುಲ್ ವಿಭಜನೆ ಗೊಂಡ ಬಳಿಕ ಮೊದಲ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಈ ಹಿಂದೆ ಎರಡೂ ಜಿಲ್ಲೆಯ ನಾಯಕರು ಎರಡನೆ ಅವಧಿಗೆ ಸಹಕಾರ ಕೊಟ್ಟಿದ್ದರು. ಈಗ ಮತ್ತೆ ಒಳ್ಳೆಯ ಆಡಳಿತ ನೀಡುವ ನಂಬಿಕೆ ಮೇಲೆ ನನಗೆ ಅಧಿಕಾರ ಕೊಟ್ಟಿದ್ದಾರೆ ಎಂದರು.

2024 ರಲ್ಲಿ ವಿಭಜನೆ ಮಾಡಿದ ಬಳಿಕ 6 ಲಕ್ಷ 52 ಸಾವಿರ ಲೀಟರ್‌ ಹಾಲು ಉತ್ಪಾದನೆ ಆಗುತಿತ್ತು. ಈಗ 8 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತಿದೆ. ರಾಜ್ಯದಲ್ಲಿ 1 ಕೋಟಿ 8 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ನಮ್ಮ ಸರಕಾರ ಪ್ರೋತ್ಸಾಹ ಧನ ನೀಡಿದ ಹಿನ್ನೆಲೆ ಹಾಲು ಉತ್ಪಾದನೆ ಹೆಚ್ಚಳವಾಗಿದೆ ಎಂದರು.

More articles

Latest article