ನವದೆಹಲಿ: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವಾರು ಅರ್ಜಿಗಳನ್ನು ಕುರಿತು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಆರಂಭಿಸಿದೆ.
ವಿಚಾರಣೆ ಸಂದರ್ಭದಲ್ಲಿ ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಆಧಾರ್ ಕಾರ್ಡ್ ಅನ್ನು ಏಕೆ ಪರಿಗಣಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ದ್ವಿಸದಸ್ಯ ಪೀಠವು ಚುನಾವಣಾ ಆಯೋಗವನ್ನು ಪ್ರಶ್ನಿಸಿತು.
ಚುನಾವಣಾ ಆಯೋಗದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಆಧಾರ್ ಕಾರ್ಡ್ ಅನ್ನು ಪೌರತ್ವಕ್ಕೆ ಪುರಾವೆಯಾಗಿ ಪರಿಗಣಿಸುತ್ತಿಲ್ಲ ಎಂದು ತಿಳಿಸಿದರು. ಹಾಗೆಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಕುರಿತು ಆಯೋಗ ಆಕ್ಷೇಪಣೆ ಹೊಂದಿದೆ ಎಂದರು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ ಶಂಕರನಾರಾಯಣ, ಬಿಹಾರದಲ್ಲಿ ಸುಮಾರು 8 ಕೋಟಿ ಮತದಾರರಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆಗೆ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ಅನುಮತಿ ನೀಡಬಹುದಿತ್ತು. ಸದ್ಯ ಚುನಾವಣಾ ಆಯೋಗದ ಅಧಿಕಾರಿಗಳು ಆಧಾರ್ ಕಾರ್ಡ್ ಮತ್ತು ಮತದಾರ ಗುರುತಿನ ಚೀಟಿಯನ್ನು ದಾಖಲೆಯಾಗಿ ಸ್ವೀಕರಿಸುತ್ತಿಲ್ಲ ಎಂಬ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದರು.
ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಪರಿಗಣಿಸಬಹುದಲ್ಲವೇ ಎಂದು ನ್ಯಾಯಾಲಯ ಪ್ರಶ್ನಿಸಿತು.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್‌ನ ಕೆ.ಸಿ. ವೇಣುಗೋಪಾಲ್, ಆರ್ ಜೆಡಿ ಸಂಸದ ಮನೋಜ್ ಝಾ, ಎನ್ ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಸಮಾಜವಾದಿ ಪಕ್ಷದ ಹರಿಂದರ್ ಸಿಂಗ್ ಮಲಿಕ್, ಶಿವಸೇನಾ (ಯುಬಿಟಿ) ನಾಯಕ ಅರವಿಂದ್ ಸಾವಂತ್, ಸೇರಿದಂತೆ ಅನೇಕರು ಆಯೋಗದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಜೂನ್ 24ರಂದು ಚುನಾವಣಾ ಆಯೋಗ ಹೊರಡಿಸಿರುವ ಆದೇಶವು ಸಂವಿಧಾನದ 14, 21, 325 ಮತ್ತು 326ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. 1950ರ ಜನ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ ನಿಯಮ 21ಎ ನಿಬಂಧನೆಯನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿಗಳಲ್ಲಿ ವಾದಿಸಲಾಗಿದೆ.