ಖ್ಯಾತ ಅಭಿನೇತ್ರಿ, ಬಹುಭಾಷಾ ತಾರೆ ಬಿ. ಸರೋಜಾ ದೇವಿ ನಿಧನ

Most read

ಬೆಂಗಳೂರು: ಕನ್ನಡ ಚಿತ್ರಲೋಕದ ಖ್ಯಾತ ಅಭಿನೇತ್ರಿ ಚತುರ್ಭಾಷಾ ತಾರೆ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ

ಮೂಲತಃ ಈಗಿನ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ 1938ರ ಜನವರಿ 7ರಂದು ಜನಿಸಿದರು. ಇವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು.  ಸರೋಜಾ ದೇವಿ ಅವರು ಬೆಂಗಳೂರಿನ ಸೇಂಟ್ ಥೆರೇಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು.

 1953ರಲ್ಲಿ ಶ್ರೀರಾಮ ಪೂಜಾ ಚಿತ್ರದ ಪುಟ್ಟ ಪಾತ್ರದ ಮೂಲಕ ಸ್ಯಾಂಡಲ್‌ ವುಡ್‌ ಪ್ರವೇಶ ಪಡೆದರು. ನಂತರ ಹೊನ್ನಪ್ಪ ಭಾಗವತರ್ ಅವರ ಮಹಾಕವಿ ಕಾಳಿದಾಸ ಚಿತ್ರದ ಮೂಲಕ ನಾಯಕ ನಟಿಯಾದ ಅವರು ಹಿಂತಿರುಗಿ ನೋಡಲೇ ಇಲ್ಲ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆ ಸೇರಿದಂತೆ ಸುಮಾರು 200ಕ್ಕೂ ಹೆಚ್ಚು  ಚಿತ್ರಗಳಲ್ಲಿ ನಟಿಸಿದ್ದಾರೆ. ದಕ್ಷಿಣ ಭಾರತದ ಬುಹೇಕ ನಾಯಕ ನಟರೊಂದಿಗೆ ಅಭನಯಿಸಿದ ಖ್ಯಾತಿ ಇವರದ್ದು. ಡಾ. ರಾಜಕುಮಾರ್, ಎಂಜಿ ರಾಮಚಂದ್ರನ್‌ ಶಿವಾಜಿ ಗಣೇಶನ್‌, ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಸುನಿಲ್ ದತ್‌ ಸೇರಿದಂತೆ ಅನೇಕ ದಿಗ್ಗಜರೊಂದಿಗೆ ನಟಿಸಿದ್ದಾರೆ.

ಸರೋಜಾ ದೇವಿ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹವಾದರು. ಆದರೆ ಇವರು 1986ರಲ್ಲಿ ನಿಧನ ಹೊಂದಿದರು. ಕೊಡಿಗೆಹಳ್ಳಿಯ ತೋಟದಲ್ಲಿ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪದ್ಮಶ್ರೀ, ಪದ್ಮಭೂಷಣ, ರಾಜ್ಯೋತ್ಸವ, ತಮಿಳುನಾಡಿನ ಕಲೈಮಾಮಣಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಸರೋಜಾದೇವಿ ಅವರಿಗೆ 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಸಿತ್ತು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು.

‘ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಅಣ್ಣ ತಂಗಿ ಬಬ್ರುವಾಹನ ಕಥಾಸಂಗಮ ಇವರು ನಟಿಸಿದ ಪ್ರಮುಖ ಚಿತ್ರಗಳು.

ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಶೋಕ ಸಂದಶದಲ್ಲಿ ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.

ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳಮೂಲಕ ಹಲವು ದಶಕಗಳಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.

More articles

Latest article