ಬೆಂಗಳೂರು: ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ನಡೆದ ಕುಂದಾಪ್ರ ಕನ್ನಡ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕರಾವಳಿಯನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕುಂದಾಪುರ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಂಡು ಕರಾವಳಿಯ ಜನರಿಗೆ ಉದ್ಯೋಗ ಸೃಷ್ಟಿಯಾಗಬೇಕು. ಅಲ್ಲಿನ ಸಂಪ್ರದಾಯ, ಸಂಸ್ಕೃತಿಯನ್ನು ಜಗತ್ತಿಗೆ ತಿಳಿಸುವ ಕೆಲಸಗಳಾಗಬೇಕು. ಅದಕ್ಕಾಗಿ 340 ಕಿ.ಮೀ. ಉದ್ದದ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಮಾಡುವ ಆಲೋಚನೆಯಿತ್ತು. ಗಡಿಬಿಡಿಯಲ್ಲಿ ಮಾಡುವುದು ಬೇಡ, ಮುಂದೆ ಮಾಡೋಣ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಕರಾವಳಿಯ ಕಲೆಯಾದ ಯಕ್ಷಗಾನ ಸೇರಿದಂತೆ ನಾಟಕ ಸಾಹಿತ್ಯ ಯಾವುದೂ ಅಳಿಸಿ ಹೋಗಬಾರದು ಎಂಬುದು ನಮ್ಮ ಕಾಳಜಿಯಾಗಿದ್ದು, ಕುಂದಾಪುರದ ಜನರ ಬೇಡಿಕೆಗಳನ್ನು ಈಡೇರಿಸುವ ಬದ್ಧತೆ ಸರಕಾಕ್ಕಿದೆ ಎಂದು ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಭಾಗ ಮಾಡಿದಾಗ ಕೆಲವರು ಟೀಕಿಸಿದ್ದರು. ಆದರೆ, ಬೆಂಗಳೂರು ಕರ್ನಾಟಕದ ಹೃದಯ ಭಾಗ. ದಕ್ಷಿಣ ಕನ್ನಡ, ಉಡುಪಿ ಸೇರಿ ಎಲ್ಲ ಭಾಗದ ಜನರ ಕೇಂದ್ರ ಸ್ಥಳವಾಗಿದ್ದು, ಯಾರಿಗೂ ತಾವು ಪರಕೀಯರು ಎಂಬ ಭಾವನೆ ಇರಬಾರದು ಎಂದರು.
ಇತ್ರನಟಿ ರಕ್ಷಿತಾ ಮಾತನಾಡಿ, , ತಾಯಿಯ ಊರು ಕುಂದಾಪುರ, ನನ್ನ ತಂದೆಯ ಊರು ದಾವಣಗೆರೆ. ಭಾಷೆಯನ್ನು ಹಬ್ಬದ ರೀತಿಯಲ್ಲಿ ಆಚರಿಸುವುದು ಸಂತೋಷದ ಸಂಗತಿ ಎಂದರು. ‘ಊರ ಗೌರವ’ ವಿಶೇಷ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಚಿತ್ರನಿರ್ದೇಶಕ ಯೋಗರಾಜ್ ಭಟ ಊರು ಅಂದರೆ ವ್ಯಕ್ತಿಗಿಂತ ದೊಡ್ದದು. ಜನ್ಮ ಕೊಟ್ಟ ಊರು ಎಲ್ಲರಿಗಿಂತಲೂ ದೊಡ್ಡದು. ನನ್ನನ್ನು ಇಲ್ಲಿಗೆ ತಂದು ನಿಲ್ಲಿಸಿದ್ದೇ ಊರು ಮತ್ತು ಭಾಷೆ ಎಂದರು.
ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ನ ಉಪೇಂದ್ರ ಶೆಟ್ಟಿ, ನಟರಾದ ಶೈನ್ ಶೆಟ್ಟಿ, ಪ್ರವೀರ್ ಶೆಟ್ಟಿ, ಲೈಫ್ ಲೈನ್ ಟೆಂಡರ್ ಚಿಕನ್ ನ ಮ್ಯಾನೇಜಿಂಗ್ ಡೈರೆಕ್ಟರ್ ಕಿಶೋರ್ ಹೆಗ್ಡೆ, ವಿಎಲ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಅಂಜಲಿ ವಿಜಯ್, ಎಎಸ್ ಗ್ರೂಪ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಸತೀಶ್ ಶೆಟ್ಟಿ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ ಉಪಸ್ಥಿತರಿದ್ದರು.