ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಲಾಗಿದೆ ಎಂಬ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.
ಮೂಡಾ ನಿವೇಶನ ಹಗರಣ ಕುರಿತು ರಾಜ್ಯ ಸರ್ಕಾರ 2024ರ ಜುಲೈನಲ್ಲಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚಿಸಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ವರದಿಯಲ್ಲಿರುವ ವಿವರಗಳು ಲಭ್ಯವಾಗಿಲ್ಲ.
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಅವರ ಪತ್ನಿ ಪಾರ್ವತಿ ಅವರ ವಿರುದ್ಧವೇ ಆರೋಪ ಕೇಳಿಬಂದಿತ್ತು. ಸಿಎಂ ಪತ್ನಿ ಪಾರ್ವತಿ ಮೂಡಾದಿಂದ ಪರ್ಯಾಯ ನಿವೇಶನ ಪಡೆದ ಫಲಾನುಭವಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿಯ ಪಾತ್ರ ಇಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ. ತಮ್ಮ ಅಧಿಕಾರ ಬಳಸಿರುವುದಕ್ಕೆ ಸೂಕ್ತ ಪುರಾವೆಗಳೂ ಇಲ್ಲ. ಅವರ ಪತ್ನಿ ಪಾರ್ವತಿ ಅವರು ಇಂತಹುದ್ದೇ ಬಡಾವಣೆಯಲ್ಲಿ ಪರ್ಯಾಯ ನಿವೇಶನ ಕೊಡಿ ಎಂಬ ಅರ್ಜಿಯಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎನ್ನಲಾಗಿದೆ.
ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ನಿವೃತ್ತ ನ್ಯಾ. ದೇಸಾಯಿ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಿರುವುದು ಮಹತ್ವದ ಬೆಳವಣಿಗೆಯಾಗಿದೆ.