ನವದೆಹಲಿ: ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ’ಅಡಿಯಲ್ಲಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ಒಂದು ವಾರದೊಳಗೆ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೊಯ್‌ಮಲ್ಯ ಬಾಗ್ಚಿ ಪೀಠವು ರಾಜ್ಯ ಸರ್ಕಾರವು ತನ್ನ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವಂತೆ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿ ನವೆಂಬರ್ 1ರೊಳಗೆ ವಾರ್ಡ್ ವಿಂಗಡಣೆ ಮತ್ತು ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿತು.
ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ ಪಾಟೀಲ, ವಕೀಲ ಡಿ.ಎಲ್.ಚಿದಾನಂದ್ ವಾದ ಮಂಡಿಸಿದರು. ಅರ್ಜಿದೃರ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೊಹಟಗಿ ಮತ್ತು ಸಿದ್ಧಾರ್ಥ್ ದವೆ ಹಾಜರಿದ್ದರು. ನ್ಯಾಯಾಲಯವು ಈ ವಿಷಯವನ್ನು ನವೆಂಬರ್ 3ರಂದು ಮುಂದಿನ ವಿಚಾರಣೆಗೆ ನಿಗದಿಪಡಿಸಿತು.
ಅರ್ಜಿದಾರರ ಪರ ವಕೀಲರು, ಪಾಲಿಕೆಗೆ ಚುನಾವಣೆ ನಡೆಯದೆ 10 ವರ್ಷಗಳು ಕಳೆದಿವೆ. ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು 2019ರ ಸೆಪ್ಟೆಂಬರ್ 10ರಂದು ಪೂರ್ಣಗೊಂಡಿತ್ತು. ಆರು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ 2020ರ ಡಿಸೆಂಬರ್ 18ರಂದು ಅಮಾನತಿನಲ್ಲಿ ಇರಿಸಿತ್ತು. ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ– 2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.