ನವದೆಹಲಿ: ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ( ಎಸ್ ಐ ಆರ್) ಮೂಲಕ ಲಕ್ಷಾಂತರ ಮತದಾರರನ್ನು ಮದದಾನದಿಂದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಇಂದೂ ಸಹ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ. ಲೋಕಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಮತ್ತು ರಾಜ್ಯಸಭೆ ಕಲಾಪವನ್ನು 2 ಗಂಟೆಗೆ ಮುಂದೂಡಲಾಗಿದೆ.
ಸಂಸತ್ ಭವನದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಪ್ರತಿಭಟನೆಯಲ್ಲಿ ಸೋನಿಯಾ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿದ್ದರು.
ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಇರುವ 124 ವರ್ಷ ವಯಸ್ಸಿನ ಮಿಂತಾ ದೇವಿ ಎಂಬ ಹೆಸರಿನ ಮತದಾರರೊಬರಿದ್ದಾರೆ. ಪ್ರಿಯಾಂಕಾ ಗಾಂಧಿ ಮತ್ತು ಅನೇಕ ಸಂಸದರು ಅವರ ಹೆಸರು ಮತ್ತು ಭಾವಚಿತ್ರ ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿ ಗಮನ ಸೆಳೆದರು.