ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಗಳ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ ಸಂದಾಯವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಇವರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಈ ಯೋಜನೆ ಜಾರಿಗೊಳಿಸಿ ಈ ಅಸ್ತ್ರವನ್ನು ನಿಮ್ಮ ಕೈಗೆ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ರೈತರ ಉಚಿತ ವಿದ್ಯುತ್ ಯೋಜನೆಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗಳಿಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆ ಸೇರಿ ಸುಮಾರು 1 ಲಕ್ಷ ಕೋಟಿಯಷ್ಟು ಹಣವನ್ನು ನಮ್ಮ ಸರ್ಕಾರ ಬಡವರ ಜೇಬಿಗೆ ಹಾಕುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು, ಕಾರ್ಯಕರ್ತರು ಈ ವಿಷಯವನ್ನು ಫಲಾನುಭವಿಗಳಿಗೆ ಸದಾ ನೆನಪಿಸುತ್ತಿರಬೇಕು ಎಂದರು.
ಈ 1 ಲಕ್ಷ ಕೋಟಿ ಹಣದಲ್ಲಿ ಬಿಜೆಪಿ ಅಥವಾ ಜೆಡಿಎಸ್ ನ ಒಂದೇ ಒಂದು ಕಾರ್ಯಕ್ರಮ ಇಲ್ಲ. ನಾನು ಶಾಸಕನಾಗಿದ್ದಾಗ ಜೆ.ಹೆಚ್ ಪಟೇಲರ ಅವಧಿಯಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆವು. 27 ಇಲಾಖೆಗಳನ್ನು ಪಂಚಾಯ್ತಿಗೆ ಸೇರಿಸಿ ಶಕ್ತಿ ತುಂಬಿದ್ದು ಕಾಂಗ್ರೆಸ್ ಪಕ್ಷ ಎಂದರು.
ಯುವಕರ ಮೇಲೆ ರಾಜೀವ್ ಗಾಂಧಿ ಅವರಿಗೆ ವಿಶೇಷ ಕಾಳಜಿ ಇದ್ದ ಕಾರಣದಿಂದಲೇ ಸಂವಿಧಾನಕ್ಕೆ 74ನೇ ತಿದ್ದುಪಡಿ ತಂದು ಪಂಚಾಯಿತಿದ ಸಂಸತ್ ವರೆಗೂ ಯುವಕರಿಗೆ ಅವಕಾಶ ಕಲ್ಪಿಸಿದರು ಎಂದರು.
ಜೆಡಿಎಸ್ ನ ದೊಡ್ಡ ಗೌಡರು, ಅವರ ಮಕ್ಕಳು, ಮೊಮ್ಮಕ್ಕಳು ಯಾವ ತ್ಯಾಗ ಮಾಡಿದ್ದಾರೆ? ಬಂದರೆ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಕೊಡುಗೆ ಏನು? ಅಧಿಕಾರಕ್ಕೆ ಬಂದ ನಂತರ ಅವರು ಬಡವರಿಗೆ ಹೊಟ್ಟೆ ತುಂಬಿಸಲಿಲ್ಲ. ಜಮೀನು ಕೊಡಲಿಲ್ಲ. ರೈತರಿಗೆ ಮೊದಲು ಉಚಿತ ವಿದ್ಯುತ್ ಕೊಟ್ಟಿದ್ದು ಬಂಗಾರಪ್ಪ ಅವರು. ನಾನು ಇಂಧನ ಸಚಿವನಾದ ಮೇಲೆ 6 ತಾಸು ಇದ್ದ ವಿದ್ಯುತ್ ಅನ್ನು 7 ತಾಸಿಗೆ ಏರಿಸಿದೆ. ಮೊದಲು ಪ್ರತಿ ವರ್ಷ ಇದಕ್ಕಾಗಿ 800 ಕೋಟಿ ನೀಡುತ್ತಿದ್ದೆವು. ಈಗ 20 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಿ ಐದು ಪಾಲಿಕೆ ರಚಿಸುತ್ತಿದ್ದೇವೆ. ಸೆ.2ರ ಹೊತ್ತಿಗೆ ಹೊಸ ಪಾಲಿಕೆ ನಾಮಫಲಕ ಅಳವಡಿಸಲಾಗುತ್ತದೆ. ನಂತರ ಕ್ಷೇತ್ರ ಮರುವಿಂಗಡಣೆ ಮಾಡಿ, ಮತದಾರರ ಪಟ್ಟಿ ಸಿದ್ಧಗೊಳಿಸಲು ಅವಕಾಶ ನೀಡಲಾಗಿದೆ. ಈ ಪ್ರಕ್ರಿಯೆ ಮುಗಿದ ನಂತರ ಪಾಲಿಕೆ ಚುನಾವಣೆ ನಡೆಸಲಾಗುವುದು ಎಂದು ವಿವರಿಸಿದರು.