ಬೆಂಗಳೂರು: ಕಳೆದ 2 ತಿಂಗಳುಗಳಿಂದ ಸ್ಥಗಿತವಾಗಿದ್ದ ಬೈಕ್ ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ರೂಪಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಹೈಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಓಲಾ ಹೊರತುಪಡಿಸಿ ಉಬರ್ ಮತ್ತು ರ್ಯಾಪಿಡೋ ಸಂಸ್ಥೆಗಳು ಆ್ಯಪ್ ಮೂಲಕ ಸೇವೆ ಪುನಾರಂಭಿಸಲಿವೆ. ರಾಜ್ಯ ಸರ್ಕಾರ ಸುರಕ್ಷತಾ ಕಾರಣಗಳಿಗಾಗಿ ಜೂನ್ 16 ರಿಂದ ಈ ಸೇವೆಯನ್ನು ಸ್ಥಗಿತಗೊಳಿಸಿತ್ತು.
ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರುತ್ತಿದ್ದಂತೆ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಬೆಂಗಳೂರು ನಗರವೊಂದರಲ್ಲೇ ಸುಮಾರು 1.20 ಲಕ್ಷ ಬೈಕ್ ಗಳು ಸೇರಿದಂತೆ ರಾಜ್ಯದಾದ್ಯಂತ 6 ಲಕ್ಷಕ್ಕೂ ಹೆಚ್ಚು ವಾಹನಗಳು ಬೈಕ್ ಟ್ಯಾಕ್ಸಿ ಸೇವೆಗೆ ನೋಂದಣಿ ಮಾಡಿಕೊಂಡಿವೆ.
ಹೈಕೋರ್ಟ್ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಅವರು, ಹೈಕೋರ್ಟ್ ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿತ್ತು, ಇತರ ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಗಮನಿಸಿ ನೀತಿ ಚೌಕಟ್ಟು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ತಿಳಿಸಿದರು.
13 ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗೆ ಕಾನೂನುಬದ್ಧ ಅನುಮತಿ ಇದೆ. ಬೈಕ್ ಟ್ಯಾಕ್ಸಿಗಳಿಂದ ಸಂಚಾರ ದಟ್ಟಣೆ ಉಂಟಾಗುವುದಿಲ್ಲ. ಲಕ್ಷಾಂತರ ಮಂದಿ ಜೀವನೋಪಾಯಕ್ಕೆ ಬೈಕ್ ಟ್ಯಾಕ್ಸಿಗಳನ್ನೇ ಅವಲಂಬಿಸಿದ್ದಾರೆ ಎಂದೂ ಕೋರ್ಟ್ ಅಭಿಪ್ರಾಯಪಟ್ಟಿದೆ.