ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

Most read

ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್ ಐ ಟಿ ತನಿಖೆ ಸ್ವತಂತ್ರವಾಗಿ ಮಾಡುತ್ತಿದ್ದು ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು ಎಂದರು.

ಎಲ್ಲಾ ವಿಷಯಗಳನ್ನೂ ರಾಜಕೀಯವಾಗಿ ಬಳಸಲು ಹೋಗಬಾರದು
ಹೊರದೇಶಗಳಿಂದ ಇದಕ್ಕಾಗಿ ಹಣ ಬಂದಿದೆ ಎಂಬ ಬಿಜೆಪಿ ಆರೋಪದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬಿಜೆಪಿಯವರಿಗೆ ಹಣ ಬಂದಿದೆ ಎಂದರು. ವಿರೋಧಗಳು ಟೀಕೆಯನ್ನು ಮಾಡಲಿ. ಆದರೆ ಎಲ್ಲಾ ವಿಷಯಗಳನ್ನೂ ರಾಜಕೀಯವಾಗಿ ಬಳಸಲು ಹೋಗಬಾರದು. ಇದರಲ್ಲಿ ಸತ್ಯವಿಲ್ಲ ಎಂದರು.

ಬಿಜೆಪಿ ಯಾರ ಪರ ಇದ್ದಾರೆ?
ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು. ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ ಎಂದು ಹೇಳಿದರು.

ಒಂದು ಕಡೆ ವೀರೇಂದ್ರ ಹೆಗ್ಗಡೆಯವರಿಗೆ ಜೈಕಾರ ಹಾಕುತ್ತಾರೆ ಮತ್ತೊಂದು ಕಡೆ ಸೌಜನ್ಯ ಪರ ಇರುವುದಾಗಿ ಹೇಳುತ್ತಾರೆ. ನಿಜವಾಗಿಯೂ ಇವರು ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು.
ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ಬೇರೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್, ಈಗ ಬೇರೆ ಹೇಳುತ್ತಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು. ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ
12 ವರ್ಷಗಳ ಅಪಹರಣ ವಾಗಿರುವುದನ್ನು ಕಣ್ಣಾರೆ ನೋಡಿದ್ದೇನೆ ಎಂದು ಎಸ್ಐಟಿಗೆ ಮಹಿಳೆಯೊಬ್ಬರು ದೂರ ನೀಡಿರುವ ಬಗ್ಗೆ ಮಾತನಾಡಿ ಇದನ್ನು ಸಿಬಿಐ ತನಿಖೆ ನಡೆದಾಗ ಏಕೆ ಹೇಳಲಿಲ್ಲ? ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ.

ಸೌಜನ್ಯ ಪ್ರಕರಣದ ಮರು ತನಿಖೆ: ಸೌಜನ್ಯ ತಾಯಿ ತೀರ್ಮಾನಿಸಬೇಕು
ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ಕನ್ನಡದ ಮೇಲೆ ಅಭಿಮಾನ, , ಪ್ರೀತಿ ಇಲ್ಲದೆ ಇದ್ದರೆ ಬರೆಯಲು ಸಾಧ್ಯವೇ?
ಬಿಜೆಪಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಆಗ ಆರ್. ಎಸ್. ಎಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು? 2017 ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು ಆಗ ಇವರೆಲ್ಲ ಎಲ್ಲಿ ಹೋಗಿದ್ದರು? ಬಾನು ಅವರು ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ , ಪ್ರೀತಿ ಇಲ್ಲದೆ ಬರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ದಸರಾ ಉದ್ಘಾಟಕರನ್ನು ಹಿಂದುಗಳಾಗಿ ಎನ್ನುವುದು ತರವಲ್ಲ
ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ , ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

More articles

Latest article