ದಾವಣಗೆರೆ: ನನ್ನನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ಸೂಚನೆ ನೀಡಲಾಗಿದೆ
ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಒಂದು ಗಂಟೆ ತಡವಾಗಿ ಆಗಮಿಸಿದರೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ನಾಯಿಯ ರೀತಿಯಲ್ಲಿ ಅವರ ಬಾಗಿಲಿನಲ್ಲಿ ಕಾಯುತ್ತಾರೆ ಎಂದು ಶಾಸಕ ಬಿ.ಪಿ. ಹರೀಶ್ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.
ಈ ದೂರಿನ ಅನ್ವಯ ವೀಶ್ವೇಶ್ವರಯ್ಯ ಉದ್ಯಾನದ ಬಳಿ ಇರುವ ಹರೀಶ್ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ. ಅವರು ಬೆಂಗಳೂರು ಪ್ರವಾಸದಲ್ಲಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.