ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧವೂ ಕೋಮುದ್ವೇಷದ ಭಾಷಣ ಮಾಡಿದ್ದಕ್ಕೆ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದರು.
ಈ ಸಂಬಂಧ ಸ್ಥಳೀಯ ಇನ್‌ಸ್ಪೆಕ್ಟರ್ ಮಂಜುನಾಥ್ ಕೋಮು ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಯತ್ನಾಳ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮಧ್ಯೆ ಮಂಡ್ಯದ ಎ ಎಸ್ ಪಿ ಈ. ತಿಮ್ಮಯ್ಯ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರ ವರ್ಗಾವಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-2 ಆಗಿರುವ ಎನ್. ನವೀನ್ ಕುಮಾರ್ ಅವರನ್ನು ಮಂಡ್ಯ ಎ.ಎಸ್.ಪಿ.-1 ಹುದ್ದೆಗೆ ನೇಮಕ ಮಾಡಲಾಗಿದೆ.