ನವದೆಹಲಿ: ಕರ್ನಾಟಕ ಸರ್ಕಾರದ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪ್ರಸಕ್ತ ಮುಂಗಾರಿನಲ್ಲಿ ಕರ್ನಾಟಕದ ಬೆಳೆಗಾರರು ಅತಿವೃಷ್ಟಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ನೆರವಾಗುವಂತೆ ಕೋರಿ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ್ ಅವರಿಗೆ ಪತ್ರ ಬರೆದಿತ್ತು
ರಾಜ್ಯದ ಮನವಿಗೆ ಸ್ಪಂದಿಸುರುವ ಕೇಮದ್ರ ಸರ್ಕಾರ ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಸಹ ನೀಡಿದ್ದಾರೆ.
ಯಾವುದೆಷ್ಟು ಖರೀದಿಗೆ ಕೇಂದ್ರ ಅಸ್ತು?: ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಕರ್ನಾಟಕದಿಂದ 38000 ಮೆಟ್ರಿಕ್ ಟನ್ ಹೆಸರು ಕಾಳು, 60,810 MT ಉದ್ದು, 15,650 MT ಸೂರ್ಯಕಾಂತಿ, 61,148 MT ಕಡಲೆಬೀಜ ಮತ್ತು 1,15,000 MT ಸೋಯಾಬಿನ್ ಖರೀದಿಗೆ ಅನುಮತಿ ನೀಡಿದೆ.