ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದಾದ್ಯಂತ ರಸ್ತೆ ಗುಂಡಿಗಳ ಸಮಸ್ಯೆ ಇದ್ದು ಕೇವಲ ಬೆಂಗಳೂರಿನಲ್ಲಿ ಮಾತ್ರ ಗುಂಡಿಗಳಿವೆ ಎಂದು ಬಿಂಬಿಸುತ್ತಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಸ್ಯೆಯನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆದರೆ ಮುಂಬರುವ ಚುನವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಟೀಕಿಸುತ್ತಿದೆ. ಅಧಿಕಾರದಲ್ಲಿದ್ದಾಗ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದರೆ ಈ ಸಮಸ್ಯೆ ಬಿಗಡಾಯಿಸುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
ಮಳೆ ಸುರಿಯುತ್ತಿದ್ದರೂ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಬೆಂಗಳುರಿನ ಎಲ್ಲ ಐದೂ ಪಾಲಿಕೆಗಳಲ್ಲಿ ಪ್ರತಿದಿನ ಸಾವಿರ ಗುಂಡಿಗಳನ್ನು ಮುಚ್ಚುವ ಕೆಲಸ ಭರದಿಂದ ಸಾಗಿದೆ ಎಂದರು.
ದೆಹಲಿಯಲ್ಲಿನ ರಸ್ತೆಗಳನ್ನು ನೋಡಿದ್ದೇನೆ. ಅಲ್ಲಿಯೂ ಗುಂಡಿಗಳಿವೆ. ಪ್ರಧಾನಿ ಮೋದಿ ಅವರ ನಿವಾಸಕ್ಕೆ ಹೋಗುವ ರಸ್ತೆಯಲ್ಲಿ ಎಷ್ಟು ಗುಂಡಿಗಳಿವೆ ಗೊತ್ತೇ? ಎಂದು ಪ್ರಶ್ನಿಸಿದರು. ಗುಂಡಿಗಳ ಸಮಸ್ಯೆ ದೇಶಾದ್ಯಂತ ಇದೆ. ನಾವು ನಮ್ಮ ಕೆಲಸವನ್ನು ಮಾಡುತ್ತಲೇ ಇದ್ದೇವೆ ಎಂದು ಐಟಿ ಕಂಪನಿಗಳು ಮತ್ತು ಇತರರಿಗೆ ನಾನು ಹೇಳ ಬಯಸುತ್ತೇನೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಿದ್ದರೆ, ಈಗ ಅಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಆದರೆ ಅವರು ಹಾಗೆ ಮಾಡಲಿಲ್ಲ. ಚುನಾವಣೆಗಳು ಸಮೀಪಿಸುತ್ತಿರುವುದರಿಂದ ರಾಜಕಾರಣ ಮಾಡಲು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.
ಇಂದು ಕೆಪಿಸಿಸಿ ಅಧ್ಯಕ್ಷರೂ ಆದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಾಳೆ ಪಾಟ್ನಾದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಇಂದು ಬಿಹಾರಕ್ಕೆ ತೆರಳಿದರು.