ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ರಚನೆಯಾಗಿರುವ 5 ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ದಪಡಿಸಬೇಕಿರುವುದರಿಂದ ಬೆಂಗಳೂರಿನಲ್ಲಿ ಮತದಾರರ ವಿಶೇಷ ಪರಿಷ್ಕರಣೆ (ಎಸ್ ಐ ಆರ್) ಯನ್ನು ಮುಂದೂಡುವಂತೆ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಅವರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಅಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಎಸ್ ಐಆರ್ ಹಮ್ಮಿಕೊಂಡಿದ್ದು, ಈ ಪ್ರಕ್ರಿಯೆಗೆ ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಬಳಸಿಕೊಳ್ಳಲಿದೆ. ಇದರಿಂದ ರಾಜ್ಯ ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿಯನ್ನು ತಯಾರಿಸಲು ಸಮಸ್ಯೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಬೇಕಾಗಿದೆ. ನವೆಂಬರ್ 1 ರೊಳಗೆ ಪಾಲಿಕೆಗಳ ಗಡಿ ಗುರುತಿಸುವ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿ ತಯಾರಿಸಬೇಕಾಗಿದೆ. ಜತೆಗೆ ನ.30 ರೊಳಗೆ ವಾರ್ಡ್ ಮೀಸಲಾತಿ ಪಟ್ಟಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕಾಗಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಮುಂದೂಡಬೇಕು ಎಂದು ಅವರು ಮನವಿ ಮಾಡಿದ್ದಾರೆ.