ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳು ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದ ಫಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪಾದಿಸಿದ್ದಾರೆ.
ಇMದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಗುಂಡಿಗಳನ್ನು ಮುಚ್ಚಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಕೆಲಸಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.
ನಗರದಲ್ಲಿ ರಸ್ತೆಗುಂಡಿಗಳಿವೆ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಅವುಗಳನ್ನು ಮುಚ್ಚಲು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡುವಂತೆ ಸಾರ್ವಜನಿಕರು ಹಾಗೂ ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ ಎಂದರು.
ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಬದ್ಧರಾಗಿದ್ದೇವೆ. ರಸ್ತ ಗುಂಡಿಗಳ ಸಮಸ್ಯೆ ಇದೆ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರಕಾರ ಬೆಂಗಳೂರಿನ ಅಭಿವೃದ್ಧಿಗೆ ಯಾವುದೇ ಅನುದಾನ ಕೊಟ್ಟಿಲ್ಲ. ನಮ್ಮ ಸರ್ಕಾರ ಬಿಡಿ! ಹಿಂದಿನ ಬಿಜೆಪಿ ಅವಧಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಅನುದಾನ ಸಿಕ್ಕಿಲ್ಲ ಎಂದು ತಿರುಗೇಟು ನೀಡಿದರು.
ನಾವು ಯಾರನ್ನೂ ಟೀಕಿಸಲು ಹೋಗುವುದಿಲ್ಲ. ಬೆಂಗಳೂರಿನ ಹಿತ ಕಾಪಾಡುತ್ತೇವೆ. ಬಿಜೆಪಿಗರು ಪ್ರತಿಭಟನೆ ಮಾಡಲಿ. ಹಾಗೆಯೇ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ಪಾಲಿಕೆಗಳ ನಗರಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಪ್ರತಿಭಟಿಸಿ ಕಾಂಗ್ರೆಸ್ ಕಾರ್ಯಕರ್ತರೂ ಹೋರಾಟ ನಡೆಸಲಿದ್ದಾರೆ ಎಂದರು.