ನಾಳೆ ಕಲಬುರಗಿ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ; ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Most read

ಬೆಂಗಳೂರು: ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ.

ಸಭೆಯಲ್ಲಿ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೀದರ್ ಜಿಲ್ಲೆಯ ಉಸ್ತುವಾರಿ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬೀದರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾರ್ಯಗಳನ್ನು ಕುರಿತು ವಿವರಿಸಿದರು.

ಈ ಮಧ್ಯೆ ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ಉಲ್ಬಣಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ ನೀಡಿದ್ದಾರೆ.

ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ  ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ   ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಬೇಕು. ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಮತ್ತು  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು.

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ.

ಗುಲ್ಬರ್ಗ, ಬಿಜಾಪುರ ಯಾದಗಿರಿ ಸೇರಿದಂತೆ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮಕ್ಕೆ ನಾಲ್ಕೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, CEO ಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

More articles

Latest article