ಬೆಂಗಳೂರು: ರಾಜ್ಯಾದ್ಯಂತ ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಬಗ್ಗೆ ಸರ್ಕಾರ ವಿಸ್ತೃತ ಚರ್ಚೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವಲ್ಲಿ ಇರುವ ತೊಡಕುಗಳ ಕುರಿತಂತೆ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ, ಬೆಂಗಳೂರು ಜಲಮಂಡಳಿ, ಕೆಪಿಟಿಸಿಎಲ್, ಬೆಸ್ಕಾಂನ ಹಿರಿಯ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಸೂಕ್ತ ದಾಖಲೆಗಳಿಲ್ಲದೆ ಕಟ್ಟಲಾಗಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳನ್ನು ಕುರಿತು ಚರ್ಚೆ ನಡೆಯಿತು.
ದಿ.17-12-2024ರ ಸುಪ್ರೀಂಕೋರ್ಟ್ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಚರ್ಚೆ ನಡೆಸಲಾಯಿತು. ಸುಪ್ರೀಂಕೋರ್ಟ್ ನ ಆದೇಶ ಭಾರತದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತಿದ್ದೂ, ಎಲ್ಲ ರಾಜ್ಯಗಳೂ ಆದೇಶವನ್ನು ಅನುಷ್ಠಾನಗೊಳಿಸುತ್ತಿವೆಯೇ? ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಲಾಗಿ, ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ. ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು. ಸೂಕ್ತ ಅನುಮತಿಗಳಿಲ್ಲದೇ ಈಗಾಗಲೇ ಮನೆ ನಿರ್ಮಿಸಿ ವಾಸವಿದ್ದಾರೆ. ಅಂತಹವರಿಗೆ ಒಂದು ಬಾರಿಗೆ ಅನ್ವಯವಾಗುವಂತೆ ನಿಯಮಿತಗೊಳಿಸಲು ಕಾನೂನಿನಲ್ಲಿ ಅವಕಾಶವಿರುವ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳ್ಳುವ ಮುಂಚೆ ಸಲ್ಲಿಕೆಯಾಗಿರುವ ಮಾರ್ಚ್ 2025ರವರೆಗಿನ ಅರ್ಜಿಗಳನ್ನು ಪರಿಗಣಿಸಿ ಒಸಿ ಮತ್ತು ಸಿಸಿಯಿಂದ ವಿನಾಯ್ತಿಗೊಳಿಸಿ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ಅಕ್ಟೋಬರ್ 8 ರಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಂಬಂಧಪಟ್ಟ ಇಲಾಖಾ ಸಚಿವರು, ಸರ್ಕಾರದ ಅಡ್ವೋಕೇಟ್ ಜನರಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.