ಬೆಂಗಳೂರು: ‘ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಒಳಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಅಕ್ಟೋಬರ್ 2 ಗಾಂಧಿ ಜಯಂತಿಯಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಂದೋಳ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೆ. ಅಲೆಮಾರಿಗಳಿಗೆ ನ್ಯಾಯ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ದೆಹಲಿಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಅವರು ಹೇಳಿದರು.
ರಾಜ್ಯ ಸರ್ಕಾರಗಳೇ ನೇಮಿಸಿದ್ದ ಈ ಹಿಂದಿನ ಎಲ್ಲ ಆಯೋಗಗಳು ಅಲೆಮಾರಿಗಳಿಗೆ ಶೇ. 1ರಷ್ಟು ಮೀಸಲಾತಿ ನೀಡಿದ್ದವು. ಸರ್ಕಾರ ಒಪ್ಪಿಕೊಂಡಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವೂ ಶೇ. 1ರಷ್ಟು ಮೀಸಲಾತಿ ನೀಡಲು ಶಿಫಾರಸು ಮಾಡಿತ್ತು. ಆದರೆ, ಒಳಮೀಸಲಾತಿ ಅನುಷ್ಠಾನಕ್ಕೆ ತರುವಾಗ ರಾಜ್ಯ ಸರ್ಕಾರವು ಈ ಮೀಸಲಾತಿಯನ್ನು ಸ್ಪರ್ಶ ಜಾತಿಗಳ ಗುಂಪಿಗೆ ಸೇರಿಸಿ 49 ಅಲೆಮಾರಿ ಸಮುದಾಯಗಳಿಗೆ 10 ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆಪಾದಿಸಿದರು.