ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಅಯ್ಕೆ ಮಾಡಲು ಸಲಹಾ ಸಮಿತಿಯನ್ನು ಸರ್ಕಾರ ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ 47 ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚನೆಯಾಗಿದೆ.
ಸಮಿತಿಯಲ್ಲಿ ಸಾಹಿತ್ಯ, ವೈದ್ಯಕೀಯ, ಕೃಷಿ, ಸಮಾಜಸೇವೆ, ಚಲನಚಿತ್ರ. ಮಾಧ್ಯಮ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ ತಜ್ಞರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಡಾ. ಸಿ.ಆರ್.ಚಂದ್ರಶೇಖರ್, ಮಾಲತಿ ಪಟ್ಟಣಶೆಟ್ಟಿ, ಸುಬ್ಬು ಹೊಲೆಯಾರ್, ಅಪ್ಪಗೆರೆ ತಿಮ್ಮರಾಜು, ಯಲ್ಲಪ್ಪ ರೆಡ್ಡಿ , ನಟ ರವಿಚಂದ್ರನ್, ನಟಿ ಗಿರಿಜಾ ಲೋಕೇಶ್, ದು. ಸರಸ್ವತಿ, ವಿಶುಕುಮಾರ್, ಶ್ರೀನಿವಾಸ ಜಿ ಕಪ್ಪಣ್ಣ ಸೇರಿದಂತೆ ಹಲವರು ಸಲಹಾ ಸಮಿತಿ ಸದಸ್ಯರಾಗಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಗಡಿ ಅಭಿವೃದ್ಧಿ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಲಲಿತಕಲಾ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರತಿನಿಧಿಗಳು ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ 70ನೇ ವರ್ಷಾಚರಣೆ ಅಂಗವಾಗಿ ಈ ಬಾರಿ 70 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.