ಶಿವಮೊಗ್ಗ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ತಿಳಿಸಿದ್ದಾರೆ.
ಅವರು ಇಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಿ ಶಾಲೆಗಳ 12 ಸಾವಿರ ಹಾಗೂ ಅನುದಾನಿತ ಶಾಲೆಗಳ 6 ಸಾವಿರ ಸೇರಿದಂತೆ ಒಟ್ಟು 18 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆ ನಂತರವೂ ಅನುದಾನಿತ ಶಾಲೆಗಳಲ್ಲಿ ಖಾಲಿ ಉಳಿಯುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಅನುದಾನಿತ ಶಾಲೆಗಳಿಗೆ 4ರಿಂದ 5 ಸಾವಿರ ಅತಿಥಿ ಶಿಕ್ಷಕರ ಅವಶ್ಯಕತೆ ಇದೆ ಎಂದು ನಿರೀಕ್ಷಿಸಲಾಗಿದೆ. ಆ ಶಿಕ್ಷಕರಿಗೂ ಗೌರವಧನವನ್ನು ಸರ್ಕಾರದಿಂದಲೇ ಪಾವತಿಸಲಾಗುವುದು. ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.
ಅಂಗವಿಕಲ ಮಕ್ಕಳಿಗೆ ಚಿಕಿತ್ಸೆ ಹಾಗೂ ಶಿಕ್ಷಣ ಎರಡಕ್ಕೂ ಅವಕಾಶವಾಗಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎರಡು ವಸತಿಯುತ ಶಾಲೆ ಆರಂಭಿಸಲಾಗುತ್ತಿದೆ. 1995ರ ನಂತರದ 10 ವರ್ಷಗಳ ಅವಧಿಯ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.