ಕರ್ನಾಟಕ ಸರ್ಕಾರದ ವೇತನ ಸಹಿತ ಋತುಚಕ್ರ ರಜೆ ದೇಶಕ್ಕೆ ಅನುಕರಣೀಯ ಮಾದರಿ: ಸುರ್ಜೇವಾಲ ಬಣ್ಣನೆ

Most read

ಬೆಂಗಳೂರು: ಕರ್ನಾಟಕ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ಘೋಷಿಸಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸರ್ಕಾರವನ್ನು ಅಭಿನಂದಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನೀತಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದೂ ಹೇಳಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು ಈ ನಿರ್ಧಾರ ಒಂದು ದಿಟ್ಟ ಹೆಜ್ಜೆಯಾಗಿದೆ. ರಾಜ್ಯ ಸರ್ಕಾರ ಮಹಿಳೆಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದೆ. “ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರು ಅನುಭವಿಸುವ ನೋವು ಮತ್ತು ಆರೋಗ್ಯದ ಸೂಕ್ಷ್ಮತೆಯನ್ನು ಗುರುತಿಸಿ ವೇತನ ಸಹಿತ ರಜೆ ಘೋಷಿಸಿರುವುದು, ಮಹಿಳೆಯರ ಸ್ವಾವಲಂಬನೆಗೆ ಮತ್ತು ಆರೋಗ್ಯಕ್ಕೆ ದಾರಿ ಮಾಡಿಕೊಟ್ಟಿದೆ. ಇದು ಕೇವಲ ರಜೆಯಲ್ಲ, ಮಹಿಳೆಯರ ಆರೋಗ್ಯದ ಹಕ್ಕು ಮತ್ತು ಘನತೆಯನ್ನು ಎತ್ತಿಹಿಡಿಯುವ ಕ್ರಮವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸರಣಿಯಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಈಗಾಗಲೇ ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಶಕ್ತಿ ಯೋಜನೆಗಳ ಮೂಲಕ ನಮ್ಮ ಸರ್ಕಾರವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಒಂದು ಮೈಲಿಗಲ್ಲು ಸಾಧಿಸಿದೆ. ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಈ ಕ್ರಮಗಳ ಬೆನ್ನಲ್ಲೇ, ದೈಹಿಕ ಆರೋಗ್ಯಕ್ಕೆ ಸಂಬಂಧಿಸಿದ ಈ ನಿರ್ಧಾರವು ಮಹಿಳೆಯರ ಪಾಲಿಗೆ ಮತ್ತಷ್ಟು ಸ್ವಾವಲಂಬನೆ ಶಕ್ತಿ ತುಂಬಿದೆ ಎಂದು ಅವರು ಬಣ್ಣಿಸಿದ್ದಾರೆ.

ಕರ್ನಾಟಕ ಸರ್ಕಾರದ ಈ ಋತುಚಕ್ರ ರಜೆ ನೀತಿ 2025 ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ, ” ಕಾಂಗ್ರೆಸ್ ಪಕ್ಷವು ಹುಟ್ಟಿನಿಂದಲೂ ಮಹಿಳೆಯರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದೆ. ಜೊತೆಗೆ ಅವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇಂತಹ ಮಾನವೀಯ ಮತ್ತು ಪ್ರಗತಿಪರ ಕ್ರಮವನ್ನು ಕೈಗೊಳ್ಳಲು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಸಾಧ್ಯ. ಈ ನಿರ್ಧಾರದಿಂದಾಗಿ ಕರ್ನಾಟಕವು ಗ್ಯಾರಂಟಿ ಯೋಜನೆಗಳ ನಂತರ ಮತ್ತೊಮ್ಮೆ ಇಡೀ ದೇಶಕ್ಕೆ ಮತ್ತು ಇತರ ರಾಜ್ಯಗಳಿಗೆ ಮಾದರಿಯಾಗಿದೆ” ಎಂದು ಪ್ರಶಂಸಿಸಿದ್ದಾರೆ.

ಕರ್ನಾಟಕ ಸರ್ಕಾರವು ಈ ನೀತಿಯನ್ನು ಜಾರಿಗೊಳಿಸುವ ಮೂಲಕ, ಈ ಸವಲತ್ತನ್ನು ಸಮಗ್ರವಾಗಿ ಮತ್ತು ಕಡ್ಡಾಯವಾಗಿ ಸಾರ್ವಜನಿಕ ಹಾಗೂ ಖಾಸಗಿ ವಲಯಕ್ಕೆ ವಿಸ್ತರಿಸಿದ ದೇಶದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ನಿರ್ಧಾರವು ಮಹಿಳಾ ಕಾರ್ಮಿಕರ ಆರೋಗ್ಯ ಮತ್ತು ಕಲ್ಯಾಣದ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದೂ ಅವರು ಹೇಳಿದ್ದಾರೆ.

More articles

Latest article