ನವದೆಹಲಿ: ಕರ್ನಾಟಕ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದರಿಂದ ಅವರು ನಿಟ್ಟುಸಿರು ಬಿಡುವಂತಾಗಿದೆ.
ಅಲ್ಲದೆ ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ನಡೆಸಿ, ಫಲಿತಾಂಶದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ತನ್ನ ಅನುಮತಿಯಿಲ್ಲದೆ ಮರುಎಣಿಕೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸುಪ್ರೀಂಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜಾಯ್‌ಮಲ್ಕ ಬಾಗ್ನಿ ದ್ವಿಸದಸ್ಯ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಿದೆ.
ಪರಾಜಿತ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಕೆ.ಎಸ್.ಮಂಜುನಾಥ್ ಗೌಡ ಅವರು, ಮತ ಎಣಿಕೆ ಪ್ರಕ್ರಿಯೆ ಕಾನೂನು ಬದ್ದವಾಗಿ ನಡೆದಿಲ್ಲ. ಮತ ಎಣಿಕೆಯಲ್ಲೇ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು.