ಅತ್ತ ತರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಸಜ್ಜಾಗಿದೆ. ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾವಿರಾರು ರೈತರು ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅತ್ತ ಕಾಂಗ್ರೆಸ್ ಪ್ರತಿಭಟನೆಗೆ ‘ಚಲೋ ದೆಹಲಿ’ ಎಂದು ಹೆಸರಿಟ್ಟಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಕ್ತ ಅನುದಾನ ನೀಡದೆ ಮೋಸ ಮಾಡುತ್ತಿದೆ ಎಂದು ಪ್ರತಿಭಟನೆಗೆ ಕರೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕೇಂದ್ರ ಸಚಿವರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಾಯಕರಿಗೂ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು, ಶಾಸಕರು, ಎಂಎಲ್‌ಸಿಗಳು ಮಂಗಳವಾರ ಸಂಜೆ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ.
ಇತ್ತ ರೈತರೆಲ್ಲರೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲು ಸಿದ್ದತೆ ಮಾಡಿಕೊಂಡಿದೆ. ರಾಜ್ಯಾದ್ಯಂತ ಸುಮಾರು 5,000 ರೈತರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರದಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಘೋಷಣೆ ಮಾಡಿ ಅನುಷ್ಠಾನಗೊಳಿಸಬೇಕು. ರಾಜ್ಯದ ರೈತರ ಸಾಲ ಮನ್ನಾ ಕುರಿತು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
”ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ರೈತರು ಬರಗಾಲ ಎದುರಿಸುತ್ತಿದ್ದು, ಜೀವನೋಪಾಯ ಅರಸಿ ವಲಸೆ ಹೋಗುತ್ತಿದ್ದಾರೆ. ಹಲವರು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆ’ ಎಂದು ಶಾಂತಕುಮಾರ್ ಹೇಳಿದ್ದಾರೆ.
ರಾಜ್ಯ ಸರ್ಕಾರವು ಕೃಷಿಗೆ 13,000 ಕೋಟಿ ರೂ.ಗಳಷ್ಟು ಹಂಚಿಕೆಯನ್ನು ಕಡಿಮೆ ಮಾಡಿದೆ. ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಮೀಸಲಿಡುವುದನ್ನು ಹೆಚ್ಚಿಸಿ ಜೊತೆಗೆ ಹೆಚ್ಚುವರಿ ಹಣವನ್ನು ಸಹ ನೀಡಬೇಕು ಎಂದು ಒತ್ತಾಹಿಸಿದ್ದಾರೆ.