ಕೋಮು ಭಾವನೆ ಪ್ರಚೋದಿಸುವ ಭಾಷಣ; rss ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ ಐ ಆರ್‌; ವಿಚಾರಣೆಗೆ ಹಾಜರಾಗಲು ನೋಟಿಸ್‌

Most read

ಮಂಗಳೂರು: ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ  ಹಾಗೂ ಕೋಮು ಭಾವನೆ ಪ್ರಚೋದಿಸುವ  ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್‌ ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ಪ್ರಕರಣ ದಾಖಲಾಗಿದೆ. ಅಕ್ಟೋಬರ್‌ 30 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್‌ ನೀಡಲಾಗಿದೆ.

ಇತ್ತೀಚೆಗೆ ಅವರು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ  ಹಾಗೂ ಧಾರ್ಮಿಕ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಈಶ್ವರಿ ಪದ್ಮುಂಜ ಶನಿತಾರ ಎಂಬುವರು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮವನ್ನು ಹಮಿಕೊಂಡಿದ್ದ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನನ್ವಯ  ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆಯನ್ನುಂಟು ಮಾಡುವುದು), ಸೆಕ್ಷನ್ 196 (ವಿವಿಧ ಗುಂಪುಗಳ ನಡುವೆ ದ್ವೇಷ ಹರಡುವುದು), ಸೆಕ್ಷನ್ 299 (ಉದ್ದೇಶಪೂರ್ವಕವಾಗಿ ಧಾರ್ಮಿಕ ದ್ವೇಷವನ್ನು ಹರಡುವುದು), ಸೆಕ್ಷನ್ 302 (ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವುದು) ಹಾಗೂ 3(5) (ಸಮಾನ ಉದ್ದೇಶದಿಂದ ಕೃತ್ಯ) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರ ಭಾಷಣವು ವೈರಲ್‌ ಆಗಿದೆ. ಇವರು  ಕೋಮು ಭಾವನೆಯನ್ನು ಪ್ರಚೋದಿಸುವ ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ಹಿಂದೂ ಮುಸ್ಲಿಂ ಸಮುದಾಯಗಳನ್ನು ಕುರಿತು ಅಪಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

More articles

Latest article