ನವದೆಹಲಿ: ಇದೇ ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹರಿಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಸೇರಿದಂತೆ ದೆಹಲಿ ಮತ್ತು ಫರಿದಾಬಾದ್ ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ಆರಂಭಿಸಿದೆ.
ಇದೇ ವಿಶ್ವವಿದ್ಯಾಲಯದ ಮೂವರು ವೈದ್ಯರು ದೆಹಲಿ ಸ್ಫೋಟದಲ್ಲಿ ಭಾಗಿಯಾಗಿದ್ದರು. ಅಲ್ ಫಲಾಹ್ ವಿಶ್ವವಿದ್ಯಾಲಯದ ಪ್ರಧಾನ ಕಚೇರಿ, ವಿಶ್ವವಿದ್ಯಾಲಯದ ಅಧ್ಯಕ್ಷ ಜಾವೇದ್ ಅಹ್ಮದ್ ಸಿದ್ದಿಕಿ ಮತ್ತು ವಿವಿಯ ಟ್ರಸ್ಟಿಗಳ ನಿವಾಸಗಳ ಮೇಲೂ ದಾಳಿ ನಡೆಸಲಾಗಿದೆ.
ಇಂದು ಬೆಳಗ್ಗೆ5 ಗಂಟೆಯಿಂದ ಎಲ್ಲ 25 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧ ಆರಂಭವಾಗಿದ್ದು, ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ. ವೈಟ್ ಕಾಲರ್ ಭಯೋತ್ಪಾದನೆಗೆ ಹಲವಾರು ವಾಹನಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಐ-20 ಕಾರು ಸ್ಪೋಟಗೊಂಡು 15 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದರು.

