ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಹಾಡ ಹಗಲೇ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಟಿಎಂಗಳಲ್ಲಿ ಹಣ ಇಡುವ ಬಗ್ಗೆ ಆರೋಪಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಲಾಗಿದೆ. ಈ ಮಾಹಿತಿ ನೀಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದು ಯಾರು? ಈ ದರೋಡೆಯಲ್ಲಿ ಹಣ ಹಾಕುವವರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಗಲಿನಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. 7 ಕೋಟಿ ರೂ.ಗೂ ಹೆಚ್ಚು ಮೊತ್ತದ ಹಣ ದರೋಡೆಯಾಗಿದೆ. ಹೊರ ರಾಜ್ಯದ ಖದೀಮರು ಭಾಗಿಯಾಗಿದ್ದಾರೆಯೇ ಎಂದೂ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ಸುಳಿವು ಸಿಕ್ಕಿದೆ. ಆದರೆ ತನಿಖೆಯ ದೃಷ್ಟಿಯಿಂದ ಯಾವುದೇ ಮಾಹಿತಿಯನ್ನು ಬಹಿರಂಗವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದು ಸಚಿವರು ಹೇಳಿದರು.

