ಬೆಂಗಳೂರು: 2024 ರಲ್ಲಿ ನಡೆದ ಲೋಕಸಭಾ ಚುನಾವಣೆಗೂ ಮುನ್ನ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ಕ್ಷೇತ್ರದ ವ್ಯಾಪ್ತಿಯ ನಲ್ಲೂರಹಳ್ಳಿ ನಿವಾಸಿ ವೈ ವಿನೋದ ಎಂಬುವರು ದೂರು ದಾಖಲಿಸಿದ್ದು ಪೊಲೀಸರು ಚುನಾವಣಾ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್ ಪ್ರಕಾರ ಗುರುತಿಸಲಾಗದ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಕಲಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಚಿನಿಂದ ಕೆಲವು ಸರ್ಕಾರಿ ಅಧಿಕಾರಿಗಳು ಲಾಭ ಪಡೆದುಕೊಂಡಿದ್ದಾರೆ. ರಾಜಕೀಯ ಪಕ್ಷವೊಂದರ ಮುಖಂಡರು ಮತ್ತು ಇತರ ಗುರುತಿಸಲಾಗದ ವ್ಯಕ್ತಿಗಳ ನೆರವು ಇಲ್ಲದೆ ಇಂತಹ ದೊಡ್ಡ ಪ್ರಮಾಣದ ಸಂಚು ರೂಪಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ದೂರುದಾರೆ ವಿನೋದಾ ಅವರು ಆರೋಪಿಸಿದ್ದಾರೆ.
ಈ ಪ್ರಕರಣ ಕುರಿತು ಸಮಗ್ರ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ತನಿಖೆ ನಡೆಸಬೇಕು ಮತ್ತು ಸಂಚಿನಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

