ವಿದ್ಯುತ್ ಕಳ್ಳತನ ನಿಯಂತ್ರಣಕ್ಕೆ ಟಿಸಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

Most read

ಯಾದಗಿರಿ:  ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಆದರೆ, ಅದರ ಪೂರೈಕೆಯನ್ನು ಸಮರ್ಪಕಗೊಳಿಸುವುದು ಅವಶ್ಯವಾಗಿದೆ. ಹೀಗಾಗಿ ಪಂಪ್ ಸೆಟ್ ಗಳಿಗಾಗಿ ಹಾಗೂ ಇತರೆ ಅವಶ್ಯಕತೆಗಳು ಮತ್ತು ಕೈಗಾರಿಕೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಳ್ಳತನ ಆಗದಂತೆ ನಿಗಾವಹಿಸಬೇಕು. ಜತೆಗೆ ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗದಂತೆ ನೋಡಿಕೊಳ್ಳಬೇಕು” ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಈಗಾಗಲೇ  ಸ್ಥಾಪಿಸಿರುವ ವಿದ್ಯುತ್ ಉಪ ಕೇಂದ್ರ ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಲಿಂಕ್ ಲೈನ್ ಗಳನ್ನು ಸ್ಥಾಪಿಸುವ ಮೂಲಕ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಕೇಂದ್ರವಾರು ಸಂಪೂರ್ಣ ಲಿಂಕ್ ಲೈನ್ ಆಗಿರುವ ಬಗ್ಗೆ ಕಕೆಪಿಟಿಸಿಎಲ್ ಹಾಗೂ ಎಸ್ಕಾಂಗಳು ನಿಗಾ ವಹಿಸಬೇಕು” ಎಂದು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿರುವ ಕಡೆಗಳಲ್ಲಿ  ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿಶೇಷವಾಗಿ ತಾಂಡಾ, ದೊಡ್ಡಿ ಮತ್ತು ಅರ್ಹರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಒಂಬತ್ತು ವಿದ್ಯುತ್ ಉಪಕೇಂದ್ರಗಳಾದ ಕೆಂಭಾವಿ, ಹುಣಸಿಹೊಳೆ, ಕವಳೂರ, ಕಂದಕೂರ, ಅಡಕಲಬಂಡಿ, ವನದುರ್ಗ, ಹಯ್ಯಳ. ಬಿ.ಕೊಡೆಕಲ್, ಗಡ್ಡೆಸುಗೂರ್ ಗಳಲ್ಲಿ ಜಮೀನು ಗುರುತಿಸುವ ಮತ್ತು ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ  ಮಾರ್ಗಸೂಚಿಯನ್ವಯ ಉಪಕೇಂದಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಯಾದಗಿರಿ ಹಾಗೂ ವಡಗೇರಾಗಳಲ್ಲಿ ವಿದ್ಯುತ್ ವೃತ್ತ ಕಚೇರಿ ಸ್ಥಾಪನೆ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು, “ರಾಜ್ಯದಲ್ಲಿ ಹೊಸದಾಗಿ ಲೈನ್ ಮೆನ್ ಗಳ ನೇಮಕ ವೇಳೆ ಯಾದಗಿರಿ ಜಿಲ್ಲೆಯಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು,” ಎಂದು ತಿಳಿಸಿದರು.

“ಕುಸುಮ್- ಬಿ ಯೋಜನೆಯಡಿ  ಸೋಲಾರ್ ಪಂಪ್ ಸೆಟ್ ಗಳನ್ನು ಅವಡಿಸಿಕೊಳ್ಳುವಂತೆ ರೈತರನ್ನು ಉತ್ತೇಜಿಸಬೇಕು. ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ವಿದ್ಯುತ್ ಮೂಲಸೌಕರ್ಯಗಳನ್ನು ತ್ವರಿತವಾಗಿ ಸರಿಪಡಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಮಾತನಾಡಿ, “ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗೆ ಅವಶ್ಯಕತೆ ಇರುವ ಸಿಬ್ಬಂದಿ ಕೊರತೆ ನೀಗಿಸಲು  ಗುಲ್ಬರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಚ್ಚುವರಿ ಸಿಬ್ಬಂದಿಯ ಸೇವೆಯನ್ನು ಯಾದಗಿರಿಗೆ ಬಳಿಸಿಕೊಳ್ಳಬೇಕು. ಸ್ಥಾಪನೆಯಾದ ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು,” ಎಂದು ಇಂಧನ ಸಚಿವರಲ್ಲಿ ಕೋರಿದರು. ತಕ್ಷಣ ಸ್ಪಂದಿಸಿದ ಸಚಿವ ಕೆ.ಜೆ.ಜಾರ್ಜ್, ಈ ಬಗ್ಗೆ ತ್ವರಿತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಂಸದ ಜಿ.ಕುಮಾರ್ ನಾಯಕ್, ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ, ವೇಣುಗೋಪಾಲ್ ನಾಯಕ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ  ಕೃಷ್ಣ ಬಾಜಪೈ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ್ ಸೇರಿದಂತೆ ವಿದ್ಯುತ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article