ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಕುರುಕುಳ ನೀಡುವ ಉದ್ದೇಶದಿಂದ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್ ನೀಡಿರುವುದು ನನಗೆ ಮತ್ತು ನನ್ನ ಸಹೋದರನಿಗೆ ಆಘಾತಕಾರಿ ಸಂಗತಿಯಾಗಿದೆ. ನಮ್ಮಿಬ್ಬರಿಗೂ ಈ ಹಿಂದೆ ಸಮನ್ಸ್ ನೀಡಿದ್ದಾಗ ಜಾರಿ ನಿರ್ದೇಶನಾಲಯಕ್ಕೆ ಎಲ್ಲಾ ವಿವರಗಳನ್ನು ನೀಡಿದ್ದೇವೆ. ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪಕ್ಷ ಸಂಕಷ್ಟದಲ್ಲಿದ್ದಾಗ ನಮ್ಮಂತಹ ಕಾಂಗ್ರೆಸ್ ಕಾರ್ಯಕರ್ತರು ಟ್ರಸ್ಟ್ಗಳ ಮೂಲಕ ಆ ಸಂಸ್ಥೆಗಳಿಗೆ ಸಹಾಯ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಇಡಿ ನೋಟಿಸ್ ನೀಡುತ್ತಿದ್ದಂತೆ ಅಗತ್ಯ ಮಾಹಿತಿ ಹಾಗೂ ಉತ್ತರವನ್ನು ನೀಡಲಾಗಿದೆ. ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಆದರೂ ದೆಹಲಿ ಪೊಲೀಸರು ಈ ತಿಂಗಳ 19 ರೊಳಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸುವುದಾಗಿ ಅವರು ಹೇಳಿದರು.
ಈ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ವಿವರವಾದ ಹಣಕಾಸು ಮತ್ತು ವಹಿವಾಟಿನ ಮಾಹಿತಿ ಕೋರಿ ಡಿ.ಕೆ. ಶಿವಕುಮಾರ್ ಸಹೋದರರಿಗೆ ನೋಟಿಸ್ ಜಾರಿ ಮಾಡಿದೆ.

