ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇದುವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು ಹಾಕುತ್ತಿವೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಅವರ ಕೃಷ್ಣಾ ಮೇಲ್ದಂಡೆ ಯೋಜನೆ (ಹಂತ-3) ಸಂಬಂಧ ಭೂಸ್ವಾಧೀನ ಪರಿಹಾರ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, ದೆಹಲಿಯಲ್ಲಿರುವ ತಮ್ಮ ಸ್ನೇಹಿತರ ಮೇಲೆ ಒತ್ತಡ ಹೇರಿ ಈ ಯೋಜನೆಗೆ ಅನುಮತಿ ಕೊಡಿಸಿದರೆ, ಕೂಡಲೇ ಸಾಲ ಮಾಡಿ ಈ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.
ಕೇಂದ್ರ ಸಚಿವ ಸೋಮಣ್ಣ ಅವರ ಜತೆ ಮೂರು ಬಾರಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಈ ಬಗ್ಗೆ ಕರೆದಿದ್ದ ಸಂಬಂಧಪಟ್ಟ ರಾಜ್ಯಗಳ ಸಭೆಯನ್ನು ಕಾರಾಣಾಂತರಗಳಿಂದ ಮುಂದೂಡಿದ್ದೇನೆ ಎಂದು ತಿಳಿಸಿದ್ದರು ಎಂದರು.
ಯೋಜನೆ ಪೂರ್ಣಗೊಳಿಸಲು ನಾವು ಬದ್ಧ ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಅವರು ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಈ ಯೋಜನೆ ಪೂರ್ಣಗೊಳಿಸಲು ನಾವು ಬದ್ದವಾಗಿದ್ದೇವೆ. ವರ್ಷಕ್ಕೆ 15-20 ಸಾವಿರ ಕೋಟಿ ನೀಡಬೇಕು, ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ನಿರ್ಧರಿಸಿದ್ದೇವೆ. ಕೆಲವು ಕಡೆ ಕೆಲಸವನ್ನೂ ಪ್ರಾರಂಭ ಮಾಡಿದ್ದೇವೆ ಎಂದು ತಿಳಿಸಿದರು.

