ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈಗ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಕುರಿತು ಮಾಧ್ಯಮಗಳು ಸಾಲು ಸಾಲು ವರದಿ ಮಾಡಿತ್ತು. ಅಲ್ಲದೇ ಸ್ವತಃ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಈ ಪ್ರಕರಣದ ತನಿಖೆ ಪ್ರಾರಂಭವಾಗುವವರೆಗೂ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಫೆಬ್ರವರಿ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು, ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.