ಬೆಂಗಳೂರಿನಲ್ಲಿ ಮತ್ತೆ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಸೇರಿ ಹಲವರ ಬಂಧನ

Most read

ಬೆಂಗಳೂರು: ಹೊಸ ವರ್ಷದ ಆಗಮನಕ್ಕೆ ಎರಡು ದಿನ ಬಾಕಿ ಇರುವಾಗ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಸಿಸಿಬಿಯ ಮಾದಕ ದ್ರವ್ಯ ನಿಯಂತ್ರಣ ವಿಭಾಗದ ಪೊಲೀಸರು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ವಿದೇಶಿ ಪ್ರಜೆಯನ್ನು ಬಂಧಿಸಿ 1 ಕೆಜಿ 70 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 60 ಎಕಸ್ಟೆಸಿ ಪಿಲ್ಸ್, 100 ಎಲ್‌ಎಸ್‌‍ಡಿ ಸ್ಟ್ರಿಪ್ಸ್, 5 ಗ್ರಾಂ ಕೊಕೇನ್‌, 2 ಮೊಬೈಲ್‌, 1 ಲ್ಯಾಪ್‌ ಟ್ಯಾಪ್‌ ಮತ್ತು ರೂ.2 ಲಕ್ಷ ನಗದು, ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 2.25 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ದೆಹಲಿ ಮತ್ತು ಮುಂಬೈನಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್‌ ಖರೀದಿಸಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಲು ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈತನ ವಿರುದ್ಧ ಈ ಹಿಂದೆಯೂ ಸಹ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆ ನಂತರವೂ ಡ್ರಗ್ಸ್‌ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ಮತ್ತೊಂದು ಪ್ರಕರಣದಲ್ಲಿ ಪೊಲೀಸರು ಅಂತಾರಾಜ್ಯ ಡ್ರಗ್ಸ್‌ ಮಾರಾಟಗಾರನನ್ನು ಬಂಧಿಸಿ 25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಿಂದ ಪೊಲೀಸರು 100 ಎಲ್‌ ಎಸ್‌ ಡಿ ಪಟ್ಟಿ, ಐದು ಗ್ರಾಂ ಕೊಕೇನ್ ಮತ್ತು ಅಪರಾಧಕ್ಕೆ ಬಳಸಲಾಗಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 25 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More articles

Latest article