ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಶಾಸಕ ನಾಗೇಂದ್ರ ತಿಳಿಸಿದ್ದಾರೆ.
ಬ್ಯಾನರ್ ಕಟ್ಟುವ ವಿಷಯಕ್ಕೆ ಆರಂಭವಾದ ಗಲಾಟೆ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ ಕೊನೆಗೊಂಡಿದೆ. ಗಾಳಿಯಲ್ಲಿ ಗುಂಡು ಹಾರಿಸಿದಾಗ ಅದು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಸಾವಿಗೀಡಾಗಿದ್ದಾರೆ. 12 ಎಂಎಂ ಸಿಂಗಲ್ ಬೋರ್ ಗುಂಡು ಹೊಕ್ಕಿ ಸಾವು ಸಂಭವಿಸಿದೆ. ಮರಣೋತ್ತರ ಪರೀಕ್ಷೆ ವೇಳೆ ಗುಂಡು ಪತ್ತೆಯಾಗಿದ್ದು ಯಾರ ಯಾವ ಗನ್ ನಿಂದ ಫೈರ್ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಇದುವರೆಗೂ ಒಟ್ಟು 23 ಮಂದಿಯನ್ನು ಬಂಧಿಸಲಾಗಿದೆ.
ಈ ಮಧ್ಯೆ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ, ನನ್ನಿಂದ ಶಾಂತಿಗೆ ಭಂಗವಾಗಿದ್ದರೆ ಸಾರ್ವಜನಿಕರ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ತನಿಖೆ ನಂತರ ಸತ್ಯಾಂಶ ಹೊರಬರಲಿದೆ. ಯಾರಿಂದಲೇ ಘಟನೆ ನಡೆದಿದ್ದರೂ ನಾನು ಬಳ್ಳಾರಿ ನಗರದ ಜನರ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.
ಬಳ್ಳಾರಿ ಬ್ಯಾನರ್ ಗಲಾಟೆ ಕುರಿತು ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ. ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸಮಿತಿಯಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ ರಘುಮೂರ್ತಿ, ಸಂಸದ ಕುಮಾರ್ ನಾಯಕ್, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಇದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

