ಬೆಂಗಳೂರು: ಇತ್ತೀಚಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ಶಿಕ್ಷಣ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಇಲಾಖೆಯು ತೀವ್ರ ಟೀಕೆಗೊಳಗಾಗಿತ್ತು. ಜನವರಿ 19 ರಿಂದ ಫೆಬ್ರವರಿ 2 ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾದಲ್ಲಿ ಕಾಲೇಜುಗಳ ಮಾನ್ಯತೆಯನ್ನು ಹಿಂತೆಗೆದುಕೊಳ್ಳುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಅಪ್‌ಲೋಡ್ ಮಾಡಿದರೂ ಕ್ರಮ ಜರುಗಿಸುವುದಾಗಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜು ಆವರಣಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ. ಮೊಬೈಲ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗದಂತೆ ನಿಗಾ ವಹಿಸಲು ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಒಂದು ವೇಳೆ ನೋಡಲ್ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಕೇಂದ್ರದ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದೂ ಇಲಾಖೆ ತಿಳಿಸಿದೆ.
ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದವು. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ದೂರು ದಾಖಲಿಸಿದ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿತ್ತು.

