ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಇವರ ವಿರುದ್ಧ ಕೇಳಿಬಂದಿರುವ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯಿಸಿ, ಅಮೃತಾ ಅವರು ದೂರು ನೀಡಿದ ತಕ್ಷಣವೇ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು,ಅವರ ಮೇಲೆ ದೂರು ದಾಖಲಾಗಿದೆ. ಈಗ ಉತ್ತರ ಕೊಡದ ಕಾರಣ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಧಿಕಾರಿಗಳ ಗೌರವ ಉಳಿಸುವ ಕೆಲಸ ಮಾಡಿದ್ದೇವೆ. ರಾಜೀವ್ ಗೌಡ ತಲೆ ಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸುತ್ತೇವೆ ಎಂದರು.

