ನವದೆಹಲಿ: ವಾರದಲ್ಲಿ ಐದು ದಿನ ಕೆಲಸ, ಪ್ರತಿ ಶನಿವಾರ ರಜೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಮುಷ್ಕರದಿಂದ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ರಾಷ್ಡ್ರೀಕೃತ ಬ್ಯಾಂಕ್ ನೌಕರರು ಮಾತ್ರ ಮುಷ್ಕರದಲ್ಲಿ ಭಾಗಿಯಾಗುತ್ತಿದ್ದು, ಖಾಸಗಿ ಬ್ಯಾಂಕ್ ನೌಕರರು ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ. ಹಾಗೆಯೇಯುಪಿಐ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್ ಮಾಧ್ಯಮದ ಮೂಲಕ ಲಭ್ಯವಾಗುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ, ಎಟಿಎಂಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆಗಳಿವೆ. ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್ಬಿಯು) ಮುಷ್ಕರಕ್ಕೆ ಕರೆ ನೀಡಿದೆ.
2024ರಲ್ಲಿ ನಡೆದ ವೇತನ ಪರಿಷ್ಕರಣೆ ಚರ್ಚೆಯಲ್ಲಿ ಎಲ್ಲ ಶನಿವಾರಗಳನ್ನು ರಜೆ ಎಂದು ಘೋಷಿಸಬೇಕು ಎಂಬ ನಿರ್ಧಾರಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ (ಐಬಿಎ) ಮತ್ತು ಯುಎಫ್ಬಿ ಒಪ್ಪಿಕೊಂಡಿದ್ದವು.ಆದರೆ ಈಗ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ತಿಳಿಸಿದೆ.
ಈ ಮುಷ್ಕರಿಂದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ), ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲ ಬ್ಯಾಂಕ್ಗಳ ಶಾಖೆಗಳಲ್ಲಿ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ನಂತಹ ಸೇವೆಗಳಲ್ಲಿ ಕೊರತೆ ಉಂಟಾಗಬಹುದು. ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್ ಸೇರಿದಂತೆ ಖಾಸಗಿ ವಲಯದ ಬ್ಯಾಂಕ್ಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್ಗಳ ವಹಿವಾಟು ಎಂದಿನಂತೆ ನಡೆಯಲಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ 40 ನಿಮಿಷ ಹೆಚ್ಚುವರಿ ಕೆಲಸ ಮಾಡಲು ಒಪ್ಪಿಕೊಂಡಿದ್ದೇವೆ. ಪ್ರತಿ ಶನಿವಾರ ರಜೆ ನೀಡುವುದರಿಂದ ಯಾವುದೇ ರೀತಿಯ ನಷ್ಟ ಒಂಟಾಗುವುದಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.

