ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಆರಂಭವಾಗಿದೆ. ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ. ಪರೀಕ್ಷೆ ಫಲಿತಾಂಶ ಏಪ್ರಿಲ್ 24 ರಂದು ಪ್ರಕಟಿಸುವ ಸಾಧ್ಯತೆಗಳಿವೆ. ಬಳಿಕ, ಪರೀಕ್ಷೆ 2 (ಪೂರಕ ಪರೀಕ್ಷೆ) ಮೇ.18 ರಿಂದ ಮೇ.25 ರವರೆಗೆ ನಡೆಯಲಿದ್ದು , ಅದರ ಫಲಿತಾಂಶವು ಜೂನ್.1 ರಂದು ಪ್ರಕಟಿಸುವ ನಿರೀಕ್ಷೆಯಿದೆ.
ಏಪ್ರಿಲ್ 2ರ ವರೆಗೂ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಯಾವುದೇ ಅಕ್ರಮ ಮತ್ತು ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಳಿ ತಿಳಿಸಿದೆ.
ಪರೀಕ್ಷೆಗೆ ನೋಂದಾಯಿಸಿದ ಒಟ್ಟು 9,02,899 ಪೈಕಿ 8,12,855 ವಿದ್ಯಾರ್ಥಿಗಳು ಹೊಸಬರು, 62,845 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಣಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್ಕಾಸ್ಟಿಂಗ್ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವದಂತಿ ಹಬ್ಬಿಸಿದರೆ ಕ್ರಮ: ವದಂತಿ ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವಂಥವರ ಮೇಲೆ ನಿಗಾ ಇರಿಸಲಾಗುತ್ತದೆ. ಜೊತೆಗೆ ಇಂಥ ಅಕ್ರಮ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸೈಬರ್ ನಿಗಾ : ವಾಟ್ಸಾಪ್, ಟೆಲಿಗ್ರಾಮ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಹಬ್ಬಿಸಿ ವಂಚಿಸುವವರ ಖಾತೆಗಳನ್ನು ನಿರ್ಬಂಧಿಸಲಾಗುವುದು ಮತ್ತು ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

