ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಆದೇಶಿಸಿದ್ದ ಗಡಿಪಾರಿಗೆ ಮತ್ತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ಎರಡು ಬಾರಿ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸೈಲ್ಲಾ ವರ್ಗೀಸ್ ಆದೇಶಿಸಿದ್ದರು. ಎರಡೂ ಬಾರಿಯೂ ಗಡಿಪಾರು ಆದೇಶಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.
ಇದೀಗ ಮೂರನೇ ಆದೇಶಕ್ಕೂ ಇಂದು ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಪ್ರಚೋದನಕಾರಿ ಭಾಷಣಗಳು ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಗಣಿಸಿ, ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿ ವಿರುದ್ಧ ಗಡಿಪಾರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮ್ಮರೋಡಿ ಹೈಕೋರ್ಟ್ ಮೊರೆ ಹೋಗಿದ್ದರು. ಎರಡು ಬಾರಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.
ಮಾ. 13 ರಂದು ಮೂರನೇ ಬಾರಿ ಗಡಿಪಾರಿಗೆ ನೀಡಿದ್ದ ಆದೇಶದಂತೆ 2026ರ ಮಾರ್ಚ್ 16 ರಿಂದ ಸೆಪ್ಟೆಂಬರ್ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿಯಲ್ಲಿ ಅವರು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಕಡ್ಡಾಯವಾಗಿ ನೆಲೆಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಮತ್ತೆ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದರು. ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರನ್ನೊಳಗೊಂಡ ಏಕಸದಸ್ಯ ಪೀಠ ಮಾರ್ಚ್ 26 ರವರೆಗೆ ತಡೆಯಾಜ್ಞೆ ನೀಡಿದೆ. ವಿಚಾರಣೆಯನ್ನು ಮತ್ತೆ ಗುರುವಾರಕ್ಕೆ ಮುಂದೂಡಲಾಗಿದೆ.

