ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಫೆಬ್ರವರಿ 27ರಂದು ಆಯೋಜಿಸಲಾಗಿದೆ. ಮೂರು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ನೌಕರರು ಇಟ್ಟಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಈ ಕುರಿತು ಮಾತನಾಡಿದ್ದು, “ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವುದಕ್ಕಾಗಿ ಏಳು ವರ್ಷಗಳ ನಂತರ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆಬ್ರವರಿ 27ರಂದು ಆಯೋಜಿಸಲಾಗಿದೆ” ಎಂದು ಹೇಳಿದರು.
ಸರ್ಕಾರಿ ನೌಕರರಿಗೆ 2 ದಿನದ ವಿಶೇಷ ರಜೆ 2017ರಲ್ಲಿ ಈ ಹಿಂದೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಸಲಾಗಿತ್ತು. ಆನಂತರದಿಂದ ಸಮ್ಮೇಳನ ನಡೆಸುವ ಅವಕಾಶ ದೊರೆತಿರಲಿಲ್ಲ. ಇದೀಗ 7 ವರ್ಷಗಳ ನಂತರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದಾರೆ.
3 ಬೇಡಿಕೆಗಳು ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಸರ್ಕಾರದ ಮುಂದೆ 3 ಬೇಡಿಕೆಗಳನ್ನು ಇಡಲಿದ್ದಾರೆ. ಈ ಕುರಿತು ಸಂಘದ ಪದಾಧಿಕಾರಿಗಳ ಸಭೆಯಲ್ಲಿಯೂ ಚರ್ಚೆ ನಡೆಸಲಾಗಿದೆ. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂಬುದು ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ರಾಜ್ಯದಲ್ಲಿ 5,09,384 ಸರ್ಕಾರಿ ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿದ್ದಾರೆ. ಹೊಸ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನು ಕೆ. ಸುಧಾಕರ್ ರಾವ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ಈಗಾಗಲೇ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿದೆ. 2023ರ ನವೆಂಬರ್‌ನಲ್ಲಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿದೆ. ಆಯೋಗದ ವರದಿಯನ್ನು ಶೀಘ್ರವೇ ಪಡೆದು ಅನುಷ್ಠಾನಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕಿದೆ. ಸಂಜೀವಿನಿ ಯೋಜನೆ ಅಂತಿಮ ಘಟ್ಟಕ್ಕೆ ಬಂದಿದ್ದು, ಶೀಘ್ರವಾಗಿ ಜಾರಿಗೊಳಿಸಿದರೆ ಸಹಾಯಕವಾಗಲಿದೆ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ.ಪ್ರತಿ ಜಿಲ್ಲೆ, ತಾಲೂಕುಗಳಿಂದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಆಗಮಿಸುವ ನೌಕರರಿಗಾಗಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ವಿವಿಧ ಸಚಿವರು ಸಹ ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನದಲ್ಲಿ 2 ರಿಂದ 3 ಲಕ್ಷ ಸರ್ಕಾರಿ ನೌಕರರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮ್ಮೇಳನ ಹಾಗೂ ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ/ ನೌಕರರಿಗೆ ದಿನಾಂಕ 27/02/2024ರಂದು ಒಂದು ದಿನ ಹಾಗೂ ಇತರ ಜಿಲ್ಲೆಗಳ ಅಧಿಕಾರಿ/ ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ 27/02/2024 ಮತ್ತು 28/02/2024 ರಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ.