ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ತೀವ್ರತೆ ಸ್ವಲ್ಪ ತಗ್ಗಲಿದ್ದರೂ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, 115.6 mm ನಿಂದ 204.5 mm ವರೆಗೆ ಭಾರಿ ಮಳೆ ಮುಂದುವರಿಯಲಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆಯ ತೀವ್ರತೆ ಹಾಗೂ ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪಿಯು ಕಾಲೇಜುಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಜುಲೈ 2ರಂದು ರಜೆ ಘೋಷಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನಲ್ಲಿ ಇಡೀ ರಾಜ್ಯದಲ್ಲೇ ಅತ್ಯಂತ ಗರಿಷ್ಠ ಪ್ರಮಾಣದ ಅಂದರೆ 199.5 ಎಂಎಂ ಮಳೆ ದಾಖಲಾಗಿದೆ. ಜಿಲ್ಲೆಯಾದ್ಯಂತ ‘ವ್ಯಾಪಕ ಮಳೆ’ಯಾಗುತ್ತಿದ್ದು, ಕಿಲ್ಪಾಡಿಯಲ್ಲಿ 171 ಎಂಎಂ, ಮಂಗಳೂರು ಬಾಲಾದಲ್ಲಿ 145.5 ಎಂಎಂ, ಪಾಂಡೇಶ್ವರದಲ್ಲಿ 140 ಎಂಎಂ ಹಾಗೂ ಸುರತ್ಕಲ್‌ನಲ್ಲಿ 132.2 ಎಂಎಂ ನಷ್ಟು ಭಾರಿ ಮಳೆಯಾಗಿದೆ.

